ADVERTISEMENT

ಹೈಕೋರ್ಟ್‌ಗಳ ನೈತಿಕ ಸ್ಥೈರ್ಯ ಕುಸಿಯಲು ಅವಕಾಶ ನೀಡುವುದಿಲ್ಲ: ಸುಪ್ರೀಂ

ಮದ್ರಾಸ್ ಹೈಕೋರ್ಟ್‌ ಹೇಳಿಕೆ ಕುರಿತು ಚುನಾವಣಾ ಆಯೋಗ ಸಲ್ಲಿಸಿದ ಅರ್ಜಿ ವಿಚಾರಣೆ

ಪಿಟಿಐ
Published 3 ಮೇ 2021, 8:14 IST
Last Updated 3 ಮೇ 2021, 8:14 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ‘ಹೈಕೋರ್ಟ್‌ಗಳು ಪ್ರಜಾಪ್ರಭುತ್ವ ಪ್ರಮುಖ ಆಧಾರ ಸ್ತಂಭಗಳಾಗಿದ್ದು, ಅವುಗಳ ನೈತಿಕ ಸ್ಥೈರ್ಯ ಕುಸಿಯಲು ಅವಕಾಶ ನೀಡುವುದಿಲ್ಲ’ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ದೇಶದಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚಲು ಚುನಾವಣಾ ಆಯೋಗವೇ ಕಾರಣ ಎಂದು ಮದ್ರಾಸ್‌ ಹೈಕೋರ್ಟ್‌ ಕಟುವಾಗಿ ತರಾಟೆಗೆ ತೆಗೆದುಕೊಂಡಿತ್ತು. ಇದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.

‘ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸುತ್ತವೆ. ಇಂಥ ಮಾಧ್ಯಮಗಳು ಹೈಕೋರ್ಟ್‌ನಂತಹ ಉನ್ನತ ನ್ಯಾಯಾಲಯಗಳಲ್ಲಿ ನಡೆಯುವ ಚರ್ಚೆಗಳನ್ನು ವರದಿ ಮಾಡುವುದನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಹೇಳಿದೆ.

ADVERTISEMENT

ಮದ್ರಾಸ್‌ ಹೈಕೋರ್ಟ್‌ ತಮ್ಮ ವಿರುದ್ಧ ಮಾಡಿದ್ದ ಕೆಲವು ಕಟು ವಿಮರ್ಶೆಗಳ ವಿರುದ್ಧ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತದಲ್ಲಿ ನಡೆದ ಚುನಾವಣಾ ರ‍್ಯಾಲಿ, ಸಭೆಗಳಲ್ಲಿ ಕೋವಿಡ್‌–19 ಮಾರ್ಗಸೂಚಿಗಳನ್ನು ಪಾಲಿಸದ ಕಾರಣ, ದೇಶದಾದ್ಯಂತ ಕೊರೊನಾ ಸೋಂಕು ಹೆಚ್ಚಾಗಿ ಸಾವುಗಳಾಗುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಚುನಾವಣಾ ಅಧಿಕಾರಿಗಳನ್ನು ಕೊಲೆ ಆರೋಪದ ಮೇಲೆ ವಿಚಾರಣೆಗೆ ಒಳಪಡಿಸಬೇಕು ಎಂದು ಮದ್ರಾಸ್ ಹೈಕೋರ್ಟ್‌ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.