ADVERTISEMENT

ಬರದ ಕುರಿತು ಕೇಂದ್ರ ತಂಡ ಹತ್ತು ದಿನಗಳಲ್ಲಿ ವರದಿ ಸಲ್ಲಿಸಲಿದೆ– ಕೃಷ್ಣ ಬೈರೇಗೌಡ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2023, 7:13 IST
Last Updated 9 ಅಕ್ಟೋಬರ್ 2023, 7:13 IST
ಕೃಷ್ಣ ಬೈರೇಗೌಡ
ಕೃಷ್ಣ ಬೈರೇಗೌಡ   

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಿರುವ ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡವು ಹತ್ತು ದಿನಗಳೊಳಗೆ ವರದಿ ಸಲ್ಲಿಸಲಿದೆ. ಆ ಬಳಿಕ ಪರಿಹಾರದ ಮೊತ್ತ ಖಚಿತವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಕೇಂದ್ರದ ಅಧಿಕಾರಿಗಳ ತಂಡಗಳ ಸದಸ್ಯರ ಜತೆ ಸೋಮವಾರ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ರಾಜ್ಯದಲ್ಲಿ ತೀವ್ರ ಬರಗಾಲ ಇರುವುದು ಕೇಂದ್ರದ ಅಧಿಕಾರಿಗಳ ತಂಡಗಳಿಗೆ ಮನವರಿಕೆ ಆಗಿದೆ. ಸಣ್ಣ ರೈತರ ಸಂಖ್ಯೆ ಸೇರಿದಂತೆ ಕೆಲವು ಅಂಕಿಅಂಶಗಳನ್ನು ಕೇಂದ್ರ ತಂಡಗಳು ಕೇಳಿವೆ. ಶೀಘ್ರದಲ್ಲಿ ಒದಗಿಸಲಾಗುವುದು' ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿ (ಎನ್ ಡಿ ಆರ್ ಎಫ್) ಅಡಿ ನೆರವು ಒದಗಿಸುವಂತೆ ರಾಜ್ಯ ಸರ್ಕಾರ ಹಿಂದೆಯೇ ಮನವಿ ಸಲ್ಲಿಸಿದೆ. ಈ ಸಂಬಂಧ ಕೇಂದ್ರ ಕೃಷಿ ಸಚಿವರ ಭೇಟಿಗೆ ಸಮಯಾವಕಾಶ ಕೋರಲಾಗಿತ್ತು. ಆದರೆ, ಅವರು ಭೇಟಿಗೆ ಅವಕಾಶ ನೀಡಿರಲಿಲ್ಲ. ಈಗ ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡದ ಅಧ್ಯಯನವು ರಾಜ್ಯದ ಮನವಿಯಲ್ಲಿನ ಅಂಶಗಳನ್ನು ದೃಢಪಡಿಸಿದೆ. ಬರದ ಕುರಿತು ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯು ವಸ್ತುನಿಷ್ಠತೆಯಿಂದ ಕೂಡಿದೆ ಎಂಬುದು ಕೇಂದ್ರ ತಂಡಕ್ಕೆ ಮನವರಿಕೆಯಾಗಿದೆ ಎಂದು ಹೇಳಿದರು.

ADVERTISEMENT

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೇಂದ್ರ ಸರ್ಕಾರವು ₹475 ಕೋಟಿಯಷ್ಟು ಕೂಲಿ ಹಣವನ್ನು ಬಾಕಿ ಇರಿಸಿಕೊಂಡಿದೆ. ಅದನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ ಎಂದರು.

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಿಂದ ರೈತರಿಗೆ ಅನುಕೂಲ ಆಗುತ್ತಿಲ್ಲ. ಈ ವಿಷಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.