
ನವದೆಹಲಿ: ದೆಹಲಿಯಿಂದ ತೆಲಂಗಾಣಕ್ಕೆ ಕೊರಿಯರ್ ಮೂಲಕ ಮಾದಕವಸ್ತು ಪೂರೈಸುತ್ತಿದ್ದ ಜಾಲವೊಂದನ್ನು ಭೇದಿಸಿರುವ ಪೊಲೀಸರು, ಮೂವರು ವಿದೇಶಿ ಪ್ರಜೆಗಳು ಸೇರಿ 10 ಮಂದಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ₹12 ಕೋಟಿ ಮೊತ್ತದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 40 ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಇವರನ್ನು ಗಡಿಪಾರು ಮಾಡುವ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ದೆಹಲಿ ಪೊಲೀಸ್ ಆಯುಕ್ತ (ಕ್ರೈಂ) ಸುರೇಂದ್ರ ಕುಮಾರ್ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಂಧಿತ ಆರೋಪಿಗಳಲ್ಲಿ ಹೆಚ್ಚಿನವರು ಆಫ್ರಿಕನ್ ಪ್ರಜೆಗಳು. ಹೊಸ ಶರ್ಟ್‌ಗಳ ಕಾಲರ್ ಒಳಗೆ ಮಾದಕವಸ್ತು ಅಡಗಿಸಿಟ್ಟು, ತೆಲಂಗಾಣಕ್ಕೆ ಕೊರಿಯರ್ ಮೂಲಕ ಕಳುಹಿಸಲಾಗುತ್ತಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಾದಕವಸ್ತು ನಿಯಂತ್ರಣ ದಳದ(ಎನ್‌ಸಿಬಿ) ಸಹಯೋಗದಲ್ಲಿ, ದೆಹಲಿ ಮತ್ತು ತೆಲಂಗಾಣ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.