ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಶಿವಸೇನಾ ಸಂಸದೆ ಭಾವನಾ ಗವಳಿ ಅವರ ಸಹಾಯಕನನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಯೀದ್ ಖಾನ್ ಬಂಧಿತ ಆರೋಪಿ. ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಇವರನ್ನು ಬಂಧಿಸಲಾಗಿದೆ. ಮುಂದಿನ ವಿಚಾರಣೆಗಾಗಿ ಇಲ್ಲಿನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
ಸಂಸದೆ ಭಾವನಾ ಗವಳಿ ಅವರಿಗೆ ಸಂಬಂಧಿಸಿದ ಕೆಲವು ಟ್ರಸ್ಟ್‌ಗಳಲ್ಲಿನ ಹಣಕಾಸಿನ ವ್ಯವಹಾರದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಯೀದ್ ಖಾನ್‌ರನ್ನು ಬಂಧಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕಳೆದ ತಿಂಗಳು ಯಾವತ್ಮಲ್, ವಾಶಿಮ್ ಮತ್ತು ಮುಂಬೈನ ಕೆಲವು ಕಡೆ ಪರಿಶೀಲನೆ ನಡೆಸಿತ್ತು.
ಮಹಾರಾಷ್ಟ್ರ ಪೊಲೀಸರು ಕೆಲವು ಆರೋಪಿಗಳ ವಿರುದ್ಧ ₹18 ಕೋಟಿ ವಂಚನೆ ಮತ್ತು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ್ದರು. ಇದನ್ನು ಆಧರಿಸಿ ಇ.ಡಿ ಆರೋಪಿಯನ್ನು ಬಂಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.