
ಗೋವಾ ಅಗ್ನಿ ದುರಂತ
ಪಣಜಿ/ನವದೆಹಲಿ: ಕಳೆದ ತಿಂಗಳು ಅಗ್ನಿ ದುರಂತ ಸಂಭವಿಸಿದ ‘ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್’ನ ಮಾಲೀಕರಾದ ಲೂಥ್ರಾ ಸಹೋದರರ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿರುವ ಜಾರಿ ನಿರ್ದೇಶನಾಲಯವು (ಇ.ಡಿ), ಇಂದು (ಶುಕ್ರವಾರ) ಅವರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿರುವ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂಥ್ರಾ ಹಾಗೂ ಸಹ-ಮಾಲೀಕ ಅಜಯ್ ಗುಪ್ತಾ ಅವರ ಕಚೇರಿಗಳು ಮತ್ತು ನಿವಾಸಗಳ ಮೇಲೆ ಇ.ಡಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹರಿಯಾಣದ ಗುರುಗ್ರಾಮ್‌ನಲ್ಲಿರುವ ವಿಲ್ಲಾಗಳು, ಗೋವಾ ಸೇರಿದಂತೆ ಸುಮಾರು 8 ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಈ ಹಿಂದೆ ಅಕ್ರಮ ಜಾಗದಲ್ಲಿದ್ದ ಕಟ್ಟಡವನ್ನು ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್’ ಎಂದು ಪರಿರ್ವತನೆ ಮಾಡಿದ್ದು, ಈ ಹಿನ್ನೆಲೆ ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ತಿಂಗಳು ‘ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್’ನಲ್ಲಿ ನಡೆದ ಬೆಂಕಿ ದುರಂತದಲ್ಲಿ 25 ಜನರು ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.