ADVERTISEMENT

ಹಣ ಅಕ್ರಮ ವರ್ಗಾವಣೆ: ಮಾಜಿ ಸಚಿವ ಸೌರಭ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ED ದಾಳಿ

ಪಿಟಿಐ
Published 26 ಆಗಸ್ಟ್ 2025, 5:58 IST
Last Updated 26 ಆಗಸ್ಟ್ 2025, 5:58 IST
ಇ.ಡಿ
ಇ.ಡಿ   

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಇಂದು (ಮಂಗಳವಾರ) ಮಾಜಿ ಸಚಿವ ಸೌರಭ್ ಭಾರದ್ವಾಜ್ ಮತ್ತು ಇತರರ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಭಾರದ್ವಾಜ್‌ ಕಚೇರಿಗಳು ಹಾಗೂ ಇತರರಿಗೆ ಸೇರಿದ ಸ್ಥಳಗಳಲ್ಲಿ ಇ.ಡಿ ದಾಳಿ ನಡೆದಿದ್ದು, ದೆಹಲಿಯ 13 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಮೂಲಸೌಕರ್ಯ ಯೋಜನೆಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪದಡಿ ಭಾರದ್ವಾಜ್, ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್, ಖಾಸಗಿ ಗುತ್ತಿಗೆದಾರರು ಮತ್ತು ಅಪರಿಚಿತ ಸರ್ಕಾರಿ ಅಧಿಕಾರಿಗಳ ವಿರುದ್ಧ ದೆಹಲಿಯ ಭ್ರಷ್ಟಾಚಾರ ನಿಗ್ರಹ ಶಾಖೆ (ಎಸಿಬಿ) ಪ್ರಕರಣ ದಾಖಲಿಸಿತ್ತು.

ADVERTISEMENT

ಎಎಪಿ ಸರ್ಕಾರದ ಅವಧಿಯಲ್ಲಿ ವಿವಿಧ ಆರೋಗ್ಯ ಮೂಲಸೌಕರ್ಯ ಯೋಜನೆಗಳಲ್ಲಿ ಅಕ್ರಮಗಳು ಮತ್ತು ಭ್ರಷ್ಟಾಚಾರ ಎಂದು ಬಿಜೆಪಿ ಆರೋಪಿಸಿದ ಬಳಿಕ ಎಸಿಬಿ ದೂರು ದಾಖಲಿಸಿಕೊಂಡಿತ್ತು.

ಆರೋಗ್ಯ ಮೂಲಸೌಕರ್ಯ ಯೋಜನೆಗಳಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ, ನ್ಯಾಯಸಮ್ಮತವಲ್ಲದ ವೆಚ್ಚ ಹೆಚ್ಚಳ, ಅನಧಿಕೃತ ನಿರ್ಮಾಣಗಳು ಮತ್ತು ಹಣವನ್ನು ದುರುಪಯೋಗಪಡಿಸಿಕೊಂಡ ಬಗ್ಗೆ ಎಫ್‌ಐಆರ್‌ನಲ್ಲಿರುವ ಆರೋಪಗಳನ್ನು ಆಧರಿಸಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಎಪಿ ನಾಯಕರ ಮಾನಹಾನಿ ಮಾಡಲು ಬಿಜೆಪಿ ಸಂಸ್ಥೆಗಳ ದುರುಪಯೋಗವನ್ನು ಮಾಡಿಕೊಂಡಿದೆ ಎಂದು ಪಕ್ಷ ಗಂಭೀರವಾಗಿ ಆರೋಪ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.