ADVERTISEMENT

ಅಡ್ವಾಣಿ, ಮುರುಳಿ ಮನೋಹರ್ ಜೋಶಿ ಭೇಟಿ ಮಾಡಿದ ಪ್ರಧಾನಿ ಮೋದಿ

​ಪ್ರಜಾವಾಣಿ ವಾರ್ತೆ
Published 24 ಮೇ 2019, 8:48 IST
Last Updated 24 ಮೇ 2019, 8:48 IST
   

ನವದೆಹಲಿ:ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಿದ ಬೆನ್ನಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಬಿಜೆಪಿಯ ಹಿರಿಯ ನಾಯಕರಾದ ಎಲ್‌.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಯಶಸ್ಸಿನ ಹಿಂದೆ ಅಡ್ವಾಣಿ ಅವರ ಶ್ರಮವಿದೆ, ಹಲವು ದಶಕಗಳ ಕಾಲ ಪಕ್ಷವನ್ನು ಕಟ್ಟಿ ಬೆಳೆಸಿದ ಶ್ರೇಯ ಅವರಿಗೆ ಸಲ್ಲುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಅಮಿತ್ ಶಾ ಅವರ ಜೊತೆಯಲ್ಲಿ ಅಡ್ವಾಣಿ ಅವರ ಕುಶಲೋಪರಿ ವಿಚಾರಿಸುತ್ತಿರುವ ಚಿತ್ರವನ್ನು ಟ್ವೀಟ್‌ ಮಾಡಿದ್ದಾರೆ.

ಬಿಜೆಪಿಯ ಮತ್ತೊಬ್ಬ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿರುವುದಾಗಿ ನರೇಂದ್ರಮೋದಿ ಟ್ವೀಟ್‌ ಮಾಡಿದ್ದಾರೆ.

ADVERTISEMENT

ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಉತ್ತಮ ಕೆಲಸ ಮಾಡಿರುವ ಮುರಳಿ ಮನೋಹರ್‌ ಜೋಶಿ ಅವರು ಲಕ್ಷಾಂತರ ಬಿಜೆಪಿ ಕಾರ್ಯಕರ್ತರುಗಳಿಗೆ ಮಾರ್ಗದರ್ಶಕರಾಗಿಯೂ ಕೆಲಸ ಮಾಡಿದ್ದಾರೆ. ನಾನು ಸಹ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿದ್ದೇನೆ, ಬಿಜೆಪಿ ಬೆಳವಣಿಗೆಯಲ್ಲಿ ಮುರಳಿ ಮನೋಹರ್ ಅವರ ಪಾಲು ಸಾಕಷ್ಟಿದೆ ಎಂದು ಮೋದಿ ಹೇಳಿದ್ದಾರೆ.

80ರ ದಶಕದಲ್ಲಿ ಕೇವಲ ಎರಡು ಸ್ಥಾನಗಳೊಂದಿಗೆ ಲೋಕಸಭೆ ಪ್ರವೇಶ ಮಾಡಿದ್ದು ಬಿಜೆಪಿ ಇಂದು 300ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಎರಡನೇ ಅವಧಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಬೆಳವಣಿಗೆಯಲ್ಲಿ ಮುಖ್ಯ ಪಾತ್ರವಹಿಸಿದ್ದ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡಿರುವ ಮೋದಿ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಹಾಗೇ ಪಕ್ಷದ ಕಾರ್ಯಕರ್ತರುಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಗುರುವಾರ ಎಲ್‌.ಕೆ. ಅಡ್ವಾಣಿ ಬಿಜೆಪಿ ಗೆಲುವಿಗೆ ಸಂತಸ ವ್ಯಕ್ತಪಡಿಸಿ ನರೇಂದ್ರ ಮೋದಿಗೆ ಶುಭಾಶಯ ಕೋರಿದ್ದರು.

17ನೇ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ 352 ಸ್ಥಾನಗಳನ್ನು ಪಡೆದಿದೆ. ಬಿಜೆಪಿಯೇ 302 ಸ್ಥಾನಗಳನ್ನು ಗೆದಿದ್ದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.