ನವದೆಹಲಿ: ‘ಭಾರತದಲ್ಲಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಜಗತ್ತಿನಲ್ಲೇ ಅತ್ಯಂತ ಕಠಿಣ ಮತ್ತು ಪಾರದರ್ಶಕವಾದ ಪ್ರಕ್ರಿಯೆ’ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಹೇಳಿದರು.
‘ಚುನಾವಣಾ ಸಮಗ್ರತೆ’ ಕುರಿತು ಸ್ಟಾಕ್‌ಹೋಮ್‌ನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಸಮಾವೇಶದಲ್ಲಿ ಬುಧವಾರ ದಿಕ್ಸೂಚಿ ಭಾಷಣ ಮಾಡಿದ ಅವರು, ‘ಪರಿಷ್ಕರಣೆಯ ಸಮಯದಲ್ಲೇ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಮತದಾರರ ಪಟ್ಟಿಯನ್ನು ಹಂಚಿಕೊಳ್ಳಲಾಗುವುದು’ ಎಂದು ಹೇಳಿದರು.
50ಕ್ಕೂ ಹೆಚ್ಚು ದೇಶಗಳಲ್ಲಿನ ಚುನಾವಣಾ ಸಂಸ್ಥೆಗಳ 100ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
‘1960ರಿಂದಲೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿಯನ್ನು ನೀಡಲಾಗುತ್ತಿದೆ. ಇದಕ್ಕೆ ಸಂಬಂಧಿಸಿದ ಆಕ್ಷೇಪಣೆ, ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದೆ’ ಎಂದು ಸಿಇಸಿ ತಿಳಿಸಿದರು.
ಕಾಂಗ್ರೆಸ್ ಸೇರಿದಂತೆ ಪ್ರಮುಖ ವಿರೋಧ ಪಕ್ಷಗಳು ಮತದಾರರ ಪಟ್ಟಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹೊತ್ತಿನಲ್ಲೇ ಚುನಾವಣಾ ಆಯುಕ್ತರು ಈ ಹೇಳಿಕೆ ನೀಡಿದ್ದಾರೆ.
ವಿರೋಧ ಪಕ್ಷದ ಮುಖಂಡರ ಆರೋಪಗಳನ್ನು ಚುನಾವಣಾ ಆಯೋಗವು ತಳ್ಳಿಹಾಕಿದ್ದು, ಅಸಂಬದ್ಧ ಎಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.