ಉದ್ಯಮಿ ಎಲಾನ್ ಮಸ್ಕ್ ಹಾಗೂ ಪ್ರಧಾನಿ ನರೇಂದ್ರ ಮೋದಿ
ರಾಯಿಟರ್ಸ್ ಚಿತ್ರ
ಬೆಂಗಳೂರು: ಇದೇ ವರ್ಷ ಭಾರತಕ್ಕೆ ಭೇಟಿ ನೀಡುವುದಾಗಿ ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸೇರಿದಂತೆ ವಿವಿಧ ಉದ್ಯಮಗಳ ಒಡೆತನ ಹೊಂದಿರುವ ಎಲಾನ್ ಮಸ್ಕ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ ಒಂದು ದಿನದ ಬಳಿಕ ಈ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ.
ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ, ಅಮೆರಿಕದ ಆಡಳಿತದಲ್ಲಿ ಭಾರಿ ಪ್ರಭಾವ ಹೊಂದಿರುವ ಮಸ್ಕ್ ಮತ್ತು ಮೋದಿ, ಶುಕ್ರವಾರವಷ್ಟೇ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು.
ಬಳಿಕ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್/ಟ್ವಿಟರ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಮೋದಿ, 'ಇಲಾನ್ ಮಸ್ಕ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಈ ವರ್ಷದ ಆರಂಭದಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಸಭೆಯ ವೇಳೆ ಚರ್ಚಿಸಿದ್ದ ವಿಚಾರಗಳೂ ಸೇರಿದಂತೆ ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿನ ಸಹಯೋಗದ ಹಾಗೂ ಇತರ ವಿಚಾರಗಳ ಕುರಿತು ಮಾತುಕತೆ ನಡೆಸಿದ್ದೇವೆ' ಎಂದಿದ್ದರು.
ಆ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಮಸ್ಕ್, 'ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದು ಗೌರವದ ಸಂಗತಿ. ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡುವುದನ್ನು ಎದುರುನೋಡುತ್ತಿದ್ದೇನೆ' ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.