ನವದೆಹಲಿ: ಕೋವಿಡ್ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ಸುರಕ್ಷತೆಗೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ಸಂಬಂಧ ಸಾಂಕ್ರಾಮಿಕ ರೋಗಗಳ (ತಿದ್ದುಪಡಿ) ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.
ಈ ಸಂಬಂಧ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರವಾಲ್ ಅವರು ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಆರೋಗ್ಯ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.
‘ಕೋವಿಡ್–19 ವಿರುದ್ಧದ ಹೋರಾಟದಲ್ಲಿ ಎಲ್ಲ ಹಂತಗಳಲ್ಲಿ ಆರೋಗ್ಯ ಕಾರ್ಯಕರ್ತರು ಅದ್ಭುತ ಕಾರ್ಯ ಮಾಡುತ್ತಿದ್ದು, ಬದ್ಧತೆ, ಕರ್ತವ್ಯ ನಿಷ್ಠೆಗೆ ನಿದರ್ಶನವಾಗಿದ್ಧಾರೆ. ಆದರೆ, ಕೆಲವೆಡೆ ಅವರ ಮೇಲೆ, ಹಲ್ಲೆ, ದೌರ್ಜನ್ಯ ಎಸಗಿರುವ ಘಟನೆಗಳೂ ಸಂಭವಿಸಿವೆ’ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
‘ಹಲ್ಲೆ, ದೌರ್ಜನ್ಯದಂತಹ ಕೃತ್ಯಗಳು ಆರೋಗ್ಯ ಕಾರ್ಯಕರ್ತರ ಮನೋಸ್ಥೈರ್ಯವನ್ನು ಕುಸಿಯುವಂತೆ ಮಾಡುತ್ತವೆ. ಇದಕ್ಕೆ ಅವಕಾಶ ನೀಡಬಾರದು’ ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.