
ಪ್ರಿಯಾಂಕಾ ಗಾಂಧಿ ವಾದ್ರಾ
ನವದೆಹಲಿ: ಲೋಕಸಭೆಯಲ್ಲಿ ಅಶಿಸ್ತಿನ ವರ್ತನೆಯ ಆರೋಪದಲ್ಲಿ ವಿಪಕ್ಷಗಳ ಎಂಟು ಸಂಸದರನ್ನು ಅಮಾನತುಗೊಳಿಸಿರುವ ಕ್ರಮವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರವಾಗಿ ಖಂಡಿಸಿದ್ದಾರೆ.
'ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲರಿಗೂ ಇದೆ' ಎಂದು ಅವರು ಪ್ರತಿಪಾದಿಸಿದ್ದಾರೆ.
'ಪ್ರಜಾಪ್ರಭುತ್ವದಲ್ಲಿ ತಮ್ಮ ಹಕ್ಕನ್ನು ಮಂಡಿಸುವ ಅವಕಾಶ ಎಲ್ಲ ಸದಸ್ಯರಿಗೂ ಇದೆ. ಅವರ ಕಳವಳಗಳನ್ನು ಆಲಿಸಬೇಕು' ಎಂದು ಅವರು ಹೇಳಿದ್ದಾರೆ.
ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರ ಅಪ್ರಕಟಿತ ಆತ್ಮಚರಿತ್ರೆಯ ಅಂಶಗಳ ಕುರಿತು ನಿಯತಕಾಲಿಕವೊಂದರಲ್ಲಿ ಪ್ರಕಟವಾಗಿರುವ ಲೇಖನದ ಬಗ್ಗೆ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕ, 'ರಾಹುಲ್ ಮಾತನಾಡಿರುವುದರಲ್ಲಿ ತಪ್ಪೇನಿದೆ? ಆಡಳಿತ ಪಕ್ಷದವರು ತಮ್ಮ ಭಾಷಣದಲ್ಲಿ ಪುಸ್ತಕ ಹಾಗೂ ನಿಯತಕಾಲಿಕೆಗಳ ಬಗ್ಗೆ ಉಲ್ಲೇಖಿಸುತ್ತಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕರು ಮಾತನಾಡುವಾಗ ಅವಕಾಶ ನೀಡದಿರುವುದು ಸರಿಯಲ್ಲ' ಎಂದಿದ್ದಾರೆ.
'ಚೀನಾ, ಪಾಕಿಸ್ತಾನ ಹಾಗೂ ವಿದೇಶಾಂಗ ವ್ಯವಹಾರಗಳ ವಿಷಯಗಳ ಕುರಿತು ಸಂಸತ್ತಿನಲ್ಲಿ ಆಗಾಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ವಾಡಿಕೆಯಂತೆ ವಿಪಕ್ಷಗಳ ನಾಯಕರಿಗೂ ತಮ್ಮ ವಾದವನ್ನು ಮಂಡಿಸುವ ಅವಕಾಶವನ್ನು ನೀಡಲಾಗುತ್ತದೆ. ಆದರೆ ಆಡಳಿತ ಸರ್ಕಾರವು ಭಯ ಭೀತಿಗೊಳಗಾಗಿದೆ' ಎಂದು ಹೇಳಿದ್ದಾರೆ.
ವಿಪಕ್ಷಗಳ ಪ್ರತಿಭಟನೆ...
ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವ ನಿರ್ಧಾರವನ್ನು ಖಂಡಿಸಿ ಸಂಸತ್ ಆವರಣದಲ್ಲಿ ಇಂದು (ಬುಧವಾರ) ವಿಪಕ್ಷಗಳ ನಾಯಕರು ಪ್ರತಿಭಟನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಭಾರತ-ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಸಂಬಂಧ, ಅಮೆರಿಕಕ್ಕೆ ಪ್ರಧಾನಿ ಮೋದಿ ತಲೆ ಬಾಗಿದ್ದಾರೆ ಎಂದು ಘೋಷಣೆ ಕೂಗಿ ಪ್ರತಿಭಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.