ADVERTISEMENT

ಎರಡು ದಶಕಗಳ ಕಾಲ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕನ ಸೆರೆ

ಪಿಟಿಐ
Published 19 ಆಗಸ್ಟ್ 2022, 5:38 IST
Last Updated 19 ಆಗಸ್ಟ್ 2022, 5:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮೋತಿಹರಿ: 1998ರಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಶಕಗಳ ಕಾಲ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕ ರಂಜನ್ ತಿವಾರಿ ಅವರನ್ನು ಭಾರತ-ನೇಪಾಳ ಗಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಗೋವಿಂದಗಂಜ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಆರೋಪಿ, 1998ರಲ್ಲಿ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದರು.

ಆರೋಪಿ ಎರಡು ದಶಕಗಳಷ್ಟು ಕಾಲ ತಲೆಮರೆಸಿಕೊಂಡಿದ್ದರು. ಆತನ ಬಂಧನಕ್ಕೆ ₹25,000 ನಗದು ಬಹುಮಾನ ಘೋಷಿಸಲಾಗಿತ್ತು.

ಕಠ್ಮಂಡುವಿಗೆ ಆರೋಪಿ ಪಲಾಯನಗೈಯಲು ಯತ್ನಿಸುತ್ತಿದ್ದ ವೇಳೆ ಉತ್ತರ ಪ್ರದೇಶ ಹಾಗೂ ಬಿಹಾರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಪ್ರಾಥಮಿಕ ವಿಧಿವಿಧಾನ ಪೂರ್ಣಗೊಳಿಸಿದ ಬಳಿಕ ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಉತ್ತರ ಪ್ರದೇಶದ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಆರೋಪಿ ವಿರುದ್ಧ ಬಿಹಾರದಲ್ಲಿ ದಾಖಲಾಗಿರುವ ಪ್ರಕರಣಗಳ ಬಗ್ಗೆಯೂ ಪರಿಶೀಲಿಸುತ್ತಿದ್ದೇವೆ ಎಂದು ಪೂರ್ವ ಚಂಪಾರಣ್‌ನ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಆಶಿಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.