ನವದೆಹಲಿ: ಕಾನೂನುಬಾಹಿರ ದೂರವಾಣಿ ವಿನಿಮಯ ಕೇಂದ್ರಗಳ ಸ್ಥಾಪನೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಎದುರಿಸುವಂತೆ ಕೇಂದ್ರದ ಮಾಜಿ ದೂರಸಂಪರ್ಕ ಸಚಿವ ದಯಾನಿಧಿ ಮಾರನ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ವಿಚಾರಣೆಗೆ ತಡೆ ನೀಡುವಂತೆ ಮಾರನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಕೇಂದ್ರದಲ್ಲಿ ’ಯುಪಿಎ–1’ ಸರ್ಕಾರದಲ್ಲಿ ಸಚಿವರಾಗಿದ್ದ ಸಂದರ್ಭದಲ್ಲಿ ತಮ್ಮ ಸಹೋದರ ಕಲಾನಿಧಿ ಮಾರನ್ ಅವರ ’ಸನ್ ಟಿವಿ’ ನೆಟ್‌ವರ್ಕ್‌ಗೆ ಪ್ರಯೋಜನವಾಗುವಂತೆ ದಯಾನಿಧಿ ಮಾರನ್ ಅವರು ಈ ಕೇಂದ್ರಗಳನ್ನು ಸ್ಥಾಪಿಸಲು ಅನುಕೂಲ ಕಲ್ಪಿಸಿದ್ದರು ಎಂದು ಆರೋಪಿಸಲಾಗಿದೆ.
ಮಾರನ್ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ಖಾಸಗಿ ದೂರವಾಣಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಿಕೊಂಡಿದ್ದರು. ಈ ಕೇಂದ್ರಗಳನ್ನು ಸನ್‌ನೆಟ್‌ವರ್ಕ್‌ನ ವ್ಯವಹಾರಗಳಿಗೆ ಬಳಸಿಕೊಳ್ಳುವ ಮೂಲಕ ಬೊಕ್ಕಸಕ್ಕೆ ₹1.78 ಕೋಟಿ ನಷ್ಟ ಮಾಡಲಾಗಿದೆ ಎಂದು ಸಿಬಿಐ ಆರೋಪಿಸಿದೆ.
ಮಾರನ್ ಸಹೋದರರು ಮತ್ತು ಇತರ ಐವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿ ಒಂದು ವರ್ಷದ ಒಳಗೆ ವಿಚಾರಣೆ ಮುಕ್ತಾಯಗೊಳಿಸುವಂತೆ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಮಾರನ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.