ಭಾರತೀಯ ವಾಯುಪಡೆಯ ವಿಮಾನ
ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ಸಮಯದಲ್ಲಿ ತನಗೆ ವಹಿಸಿದ್ದ ಕಾರ್ಯಗಳನ್ನು ನಿಖರವಾಗಿ ಮತ್ತು ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದು ಭಾರತೀಯ ವಾಯುಪಡೆ ( ಐಎಎಫ್ ) ಭಾನುವಾರ ಹೇಳಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ 9 ಸ್ಥಳಗಳನ್ನು ಗುರಿಯಾಗಿಸಿಕೊಂಡು ಮೇ 7 ರಂದು 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಐಎಎಫ್ ಹೇಳಿಕೆಯಲ್ಲಿ ತಿಳಿಸಿದೆ.
ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ, ವಿವರವಾದ ಮಾಹಿತಿಯನ್ನು ಸೂಕ್ತ ಸಮಯದಲ್ಲಿ ನೀಡಲಾಗುವುದು. ಊಹಾಪೋಹಗಳಿಗೆ ಯಾರೂ ಕಿವಿಗೊಡಬೇಡಿ ಎಂದೂ ಐಎಎಫ್ ಹೇಳಿದೆ.
ಮೇ 10ರ ಸಂಜೆ 5 ಗಂಟೆಯಿಂದ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿರುವುದಾಗಿ ವಿದೇಶಾಂಗ ಸಚಿವಾಲಯ ಘೋಷಿಸಿದೆ. ಭೂ, ವಾಯು ಮತ್ತು ನೌಕಾ ಪಡೆಯ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ತಿಳಿಸಿದ್ದಾರೆ.
ಆಪರೇಷನ್ ಸಿಂಧೂರ ಹೆಸರಿನ ಕಾರ್ಯಾಚರಣೆಯಲ್ಲಿ ತನಗೆ ವಹಿಸಿದ ಕಾರ್ಯಗಳನ್ನು ನಿಖರ ಮತ್ತು ವೃತ್ತಿಪರತೆಯಿಂದ ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಕಾರ್ಯಾಚರಣೆಗಳನ್ನು ಉದ್ದೇಶಪೂರ್ವಕ ಮತ್ತು ವಿವೇಚನಾಯುಕ್ತ ರೀತಿಯಲ್ಲಿ, ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ನಡೆಸಲಾಗಿದೆ ಎಂದು ಐಎಎಫ್ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.