ಸುಪ್ರೀಂ ಕೋರ್ಟ್
ನವದೆಹಲಿ: ಬಿಹಾರದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಪ್ರಕಟಿಸಲಾಗಿರುವ ಮತದಾರರ ಅಂತಿಮ ಪಟ್ಟಿಯಲ್ಲಿ ಇರುವ ಕಾಗುಣಿತ ದೋಷಗಳು ಮತ್ತು ಇತರ ತಪ್ಪುಗಳನ್ನು ಪರಿಶೀಲಿಸಿ, ಸರಿಪಡಿಸಲು ಚುನಾವಣಾ ಆಯೋಗ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ನಿರೀಕ್ಷಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್‌ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಈ ಕುರಿತು ವಿಚಾರಣೆ ನಡೆಸಿತು. ಎಸ್‌ಐಆರ್‌ಗೆ ಸಂಬಂಧಿಸಿದ ಕಾನೂನು ಸಮಸ್ಯೆಗಳ ಬಗ್ಗೆ ನವೆಂಬರ್ 4ರಂದು ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿತು.
‘ಮತದಾರರ ಅಂತಿಮ ಪಟ್ಟಿಯನ್ನು ಸೆಪ್ಟೆಂಬರ್ 30ರಂದು ಪ್ರಕಟಿಸಲಾಗಿದ್ದು, ಅಲ್ಲಿಂದ ಇಲ್ಲಿಯವರೆಗೆ ಯಾವುದೇ ಮತದಾರರೂ ದೂರು ನೀಡಿಲ್ಲ’ ಎಂದು ಆಯೋಗವು ಪೀಠದ ಗಮನಕ್ಕೆ ತಂದಿತು.
‘ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್’ (ಎಡಿಆರ್) ಪರ ಹಾಜರಾದ ವಕೀಲ ಪ್ರಶಾಂತ್ ಭೂಷಣ್, ‘ಎಷ್ಟು ಮತದಾರರ ಹೆಸರನ್ನು ಅಳಿಸಲಾಗಿದೆ ಮತ್ತು ಪರಿಷ್ಕರಣೆ ಕಾರ್ಯದಲ್ಲಿ ಅಳವಡಿಸಿಕೊಂಡ ಪಾರದರ್ಶಕತೆ ಕುರಿತು ಆಯೋಗ ಮಾಹಿತಿ ನೀಡಬೇಕು’ ಎಂದು ಕೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.