ADVERTISEMENT

ಕೃಷಿ ಕಾಯ್ದೆ: ದೆಹಲಿ ಗಡಿಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲು ರೈತರ ನಿರ್ಧಾರ

ಏಜೆನ್ಸೀಸ್
Published 22 ಜನವರಿ 2021, 14:17 IST
Last Updated 22 ಜನವರಿ 2021, 14:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ಶುಕ್ರವಾರ ನಡೆದ 11ನೇ ಸುತ್ತಿನ ಮಾತುಕತೆಯೂ ವಿಫಲಗೊಂಡಿದೆ. ಆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರೈತ ಮುಖಂಡರು ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈಲ್ವೆ, ವಾಣಿಜ್ಯ ಮತ್ತು ಆಹಾರ ಸಚಿವ ಪಿಯೂಷ್ ಗೋಯಲ್ ಮತ್ತು ಪಂಜಾಬ್ ಸಂಸದ ಹಾಗೂ ಕೇಂದ್ರ ಖಾತೆ ರಾಜ್ಯ ಸಚಿವ ಸೋಮ್ ಪ್ರಕಾಶ್ ಅವರು ರೈತ ನಾಯಕರ ಜೊತೆಗಿನ ಮಾತುಕತೆಯಲ್ಲಿ ಭಾಗಿಯಾಗಿದ್ದರು.

'ಕೃಷಿ ಕಾನೂನುಗಳ ಅನುಷ್ಠಾನವನ್ನು ಒಂದೂವರೆ ವರ್ಷಗಳ ಕಾಲ ಅಮಾನತುಗೊಳಿಸಲು ಸರ್ಕಾರ ತಯಾರಿದೆ. ರೈತ ಸಂಘಗಳು ಈ ಪ್ರಸ್ತಾಪವನ್ನು ಸ್ವೀಕರಿಸಲು ಸಿದ್ಧವಾದರೆ ಮಾತ್ರ ಮುಂದಿನ ಸುತ್ತಿನ ಸಭೆ ನಡೆಸಲಾಗುವುದು ಎಂಬುದಾಗಿ ಕೇಂದ್ರ ಸಚಿವರು ಹೇಳಿದರು' ಎಂದು ಭಾರತೀಯ ಕಿಸಾನ್ ಯೂನಿಯನ್‌ನ ಮುಖಂಡರು ತಿಳಿಸಿದ್ದಾರೆ.

ADVERTISEMENT

ಸರ್ಕಾರದ ಈ ದೋರಣೆಗೆ ರೈತ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಾಷ್ಟ್ರ ರಾಜಧಾನಿಯ ಗಡಿಭಾಗಗಳಲ್ಲಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಜನವರಿ 26ರಂದು ದೆಹಲಿಯ ಹೊರ ವರ್ತುಲ ರಸ್ತೆಯಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ ನಡೆಸಿಯೇ ತೀರುವುದಾಗಿ ರೈತರು ಹೇಳಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳ ರದ್ದತಿಗೆ ಆಗ್ರಹಿಸಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶಗಳ ಸಾವಿರಾರು ರೈತರು ದೆಹಲಿಯ ಗಡಿ ಭಾಗಗಳಲ್ಲಿ ಕಳೆದ ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.