ADVERTISEMENT

ಹರಿಯಾಣ: ಮುಖ್ಯಮಂತ್ರಿ ಎದುರು ಪ್ರತಿಭಟನೆ ನಡೆಸಲು ಮುಂದಾದ ರೈತರು, ಲಾಠಿಚಾರ್ಜ್‌

ಪಿಟಿಐ
Published 4 ಏಪ್ರಿಲ್ 2021, 2:25 IST
Last Updated 4 ಏಪ್ರಿಲ್ 2021, 2:25 IST
ಹರಿಯಾಣದ ರೋಹ್ಟಕ್‌ನಲ್ಲಿ ರೈತರ ಪ್ರತಿಭಟನೆ – ಪಿಟಿಐ ಚಿತ್ರ
ಹರಿಯಾಣದ ರೋಹ್ಟಕ್‌ನಲ್ಲಿ ರೈತರ ಪ್ರತಿಭಟನೆ – ಪಿಟಿಐ ಚಿತ್ರ   

ಚಂಡೀಗಡ: ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತರ ಮೇಲೆ ಹರಿಯಾಣದ ರೋಹ್ಟಕ್‌ನಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

ಘಟನೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಲವು ರೈತರೂ ಗಾಯಗೊಂಡಿದ್ದಾರೆ ಎಂದು ಪ್ರತಿಭಟನಾನಿರತರು ಹೇಳಿಕೊಂಡಿದ್ದಾರೆ.

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಾದ ಸ್ಥಳವನ್ನು ಬದಲಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಾಸಗಿ ವಿಶ್ವವಿದ್ಯಾಲಯವೊಂದರ ಬಳಿ ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಿತ್ತು. ರೋಹ್ಟಕ್‌ ಸಂಸದ ಅರವಿಂದ್ ಶರ್ಮಾ ಅವರ ತಂದೆಯ ಗೌರವಾರ್ಥ ಏರ್ಪಡಿಸಲಾಗಿದ್ದ ಸಂತಾಪಸೂಚಕ ಸಭೆಯಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಳ್ಳಬೇಕಿತ್ತು. ಅದೇ ಪ್ರದೇಶದಲ್ಲಿ ಜಮಾಯಿಸಿದ್ದ ರೈತರು ಪ್ರತಿಭಟನೆಗೆ ಮುಂದಾಗಿದ್ದರು.

ಮುಖ್ಯಮಂತ್ರಿಗಳು ಬರುವ ಕಾರಣ ಬಿಗಿಬಂದೋಬಸ್ತ್ ಕಲ್ಪಿಸಲಾಗಿತ್ತು. ಬ್ಯಾರಿಕೇಡ್‌ಗಳನ್ನು ಹಾಕಿ ಮುನ್ನೆಚ್ಚರಿಕೆ ವಹಿಸಲಾಗಿತ್ತು. ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ ರೈತರು ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.