
ಅಮರಿಂದರ್ ಸಿಂಗ್ ರಾಜಾ ವಾರಿಂಗ್
ಚಂಡೀಗಢ: ಕೇಂದ್ರದ ಮಾಜಿ ಸಚಿವ, ದಿವಂಗತ ಬೂಟಾ ಸಿಂಗ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಮತ್ತು ಜಾತಿ ನಿಂದನೆ ಮಾಡಿರುವ ಪ್ರಕರಣ ಸಂಬಂಧ ಪಂಜಾಬ್‌ನ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೂಟಾ ಸಿಂಗ್ ಅವರ ಪುತ್ರ ಸರಬ್ಜೋತ್ ಸಿಂಗ್ ಸಿಧು ಅವರು ನೀಡಿದ ದೂರಿನ ಮೇರೆಗೆ ಕಪುರ್ತಲಾ ಜಿಲ್ಲೆಯ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅಮರಿಂದರ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಮರಿಂದರ್ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 353, 196 ಹಾಗೂ 1989ರ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(u) ಮತ್ತು 3(1)(v) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನವೆಂಬರ್ 11ರಂದು ನಡೆಯಲಿರುವ ತರಣ್ ತರಣ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ಪ್ರಚಾರ ಮಾಡುತ್ತಿದ್ದ ವೇಳೆ ವಾರಿಂಗ್ ಅವರು ಬೂಟಾ ಸಿಂಗ್ ಅವರ ಚರ್ಮದ ಬಣ್ಣದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ತಮ್ಮ ಹೇಳಿಕೆಗಳ ಕುರಿತು ಸಾರ್ವಜನಿಕ ವಲಯದಲ್ಲಿ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ವಾರಿಂಗ್ ಅವರು ಸೋಮವಾರ ಕ್ಷಮೆಯಾಚಿಸಿದ್ದರು. ಜತೆಗೆ, ಬೂಟಾ ಸಿಂಗ್ ಅವರು ನಮ್ಮ ತಂದೆ ಇದ್ದಂತೆ. ಅವರಿಗೆ ಅಗೌರವ ತೋರಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.