ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ (ಜಿಎಂಸಿ) ಇಂದು (ಮಂಗಳವಾರ) ಬೆಂಕಿ ಅವಘಡ ಸಂಭವಿಸಿದ್ದು, 150ಕ್ಕೂ ಅಧಿಕ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ರಜೌರಿ ಪಟ್ಟಣದಲ್ಲಿರುವ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಮಂಗಳವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿತು. ಯಾವುದೇ ಸಾವು-ನೋವು ವರದಿಯಾಗಿಲ್ಲ' ಎಂದು ಅಗ್ನಿಶಾಮಕದಳ ಅಧಿಕಾರಿ ಹಿಮಾಂಶು ಗುಪ್ತಾ ತಿಳಿಸಿದ್ದಾರೆ.
'ಆಸ್ಪತ್ರೆಯ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿತ್ತು. ಒಂದು ಗಂಟೆಯೊಳಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಯಿತು' ಎಂದು ಅವರು ತಿಳಿಸಿದ್ದಾರೆ.
ಮೂರು ಅಗ್ನಿಶಾಮಕ ವಾಹನಗಳ ನೆರವಿನಿಂದ ಬೆಂಕಿ ನಂದಿಸಲಾಯಿತು. ಬೆಂಕಿ ಅವಘಡ ಸಂಬಂಧ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ.
'ಒಪಿಡಿ ಸೇರಿದಂತೆ ಆಸ್ಪತ್ರೆಯ ಸಹಜ ಕಾರ್ಯಾಚರಣೆ ಪುನಃಸ್ಥಾಪಿಸುವುದಕ್ಕೆ ಮೊದಲ ಆದ್ಯತೆ ನೀಡಿದ್ದೇವೆ' ಎಂದು ರಜೌರಿಯ ಡೆಪ್ಯೂಟಿ ಕಮಿಷನರ್ ಅಭಿಷೇಕ್ ಶರ್ಮಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.