ADVERTISEMENT

ಪುಣೆಯ ಸೀರಂ ಇನ್‌ಸ್ಟಿಟ್ಯೂಟ್‌ನಲ್ಲಿ ಬೆಂಕಿ ದುರಂತ: ಪ್ರಧಾನಿ ಮೋದಿ ಸಂತಾಪ

ಏಜೆನ್ಸೀಸ್
Published 21 ಜನವರಿ 2021, 15:02 IST
Last Updated 21 ಜನವರಿ 2021, 15:02 IST
ಪುಣೆಯ ಸೀರಂ ಇನ್‌ಸ್ಟಿಟ್ಯೂಟ್‌ನಲ್ಲಿ ಬೆಂಕಿ ಹೊತ್ತಿಕೊಂಡಿರುವ ದೃಶ್ಯ
ಪುಣೆಯ ಸೀರಂ ಇನ್‌ಸ್ಟಿಟ್ಯೂಟ್‌ನಲ್ಲಿ ಬೆಂಕಿ ಹೊತ್ತಿಕೊಂಡಿರುವ ದೃಶ್ಯ   

ಪುಣೆ: ಸೀರಂ ಇನ್‌ಸ್ಟಿಟ್ಯೂಟ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಗುರುವಾರ ಸಂಜೆ ಟ್ವೀಟ್‌ ಮಾಡಿರುವ ಅವರು, 'ಸೀರಂ ಇನ್‌ಸ್ಟಿಟ್ಯೂಟ್‌ನಲ್ಲಿ ಸಂಭವಿಸಿದ ದುರದೃಷ್ಟಕರ ಘಟನೆಯು ದುಃಖ ತಂದಿದೆ. ಈ ಅವಘಡದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲೆಂದು ನಾನು ಪ್ರಾರ್ಥಿಸುತ್ತೇನೆ' ಎಂದು ತಿಳಿಸಿದ್ದಾರೆ.

ಸೀರಂ‌ ಇನ್‌ಸ್ಟಿಟ್ಯೂಟ್‌ಗೆಭೇಟಿ ನೀಡಲಿರುವ ಉದ್ದವ್‌ ಠಾಕ್ರೆ

ADVERTISEMENT

ಅಗ್ನಿ ಅವಘಡದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ಅವರು ಪುಣೆಯ ಸೀರಂ‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಘಟಕಕ್ಕೆ ಶುಕ್ರವಾರ ಮಧ್ಯಾಹ್ನ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿಯಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನೆಕಾ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಲಸಿಕೆಯನ್ನು ಪುಣೆ ಮೂಲದ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸುತ್ತಿದೆ.

'ಬೆಂಕಿಯಿಂದಾಗಿ ಕೋವಿಶೀಲ್ಡ್ ಲಸಿಕೆ ಉತ್ಪಾದನೆಗೆ ತೊಂದರೆಯಾಗಿಲ್ಲ,' ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆದರ್ ಪೂನವಾಲಾ ಹೇಳಿದ್ದಾರೆ. ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಸಂಸ್ಥೆಯ ಮುಖ್ಯಸ್ಥ ಆದರ್‌ ಪೂನಾವಾಲಾ ಅವರು ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.