ಸಂಜೀವ್ ಭಟ್
ನವದೆಹಲಿ: 1990ರಲ್ಲಿ ಪೊಲೀಸ್ ವಶದಲ್ಲಿ ಇದ್ದಾಗಲೇ ವ್ಯಕ್ತಿಯೊಬ್ಬ ಮೃತಪಟ್ಟ ಪ್ರಕರಣದಲ್ಲಿ ದೋಷಿಯಾಗಿರುವ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಈ ಪ್ರಕರಣದಲ್ಲಿ ಭಟ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನು ಒಳಗೊಂಡ ನ್ಯಾಯಪೀಠವು, ಪ್ರಕರಣದಲ್ಲಿ ಜಾಮೀನು ನೀಡಬೇಕು ಅಥವಾ ವಿಧಿಸಿರುವ ಶಿಕ್ಷೆಯನ್ನು ಅಮಾನತು ಮಾಡಬೇಕು
ಎನ್ನುವುದರಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿತು.
ಭಟ್ ಅವರು, ದೋಷಾರೋಪಣೆ ಮತ್ತು ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯೂ ಬಾಕಿ ಇದೆ.
ಪ್ರಕರಣವೇನು:
ಬಿಜೆಪಿ ನಾಯಕ ಎಲ್.ಕೆ. ಅಡ್ವಾಣಿ ಅವರ ರಥಯಾತ್ರೆಯ ಸಂದರ್ಭದಲ್ಲಿ ಕರೆ ನೀಡಿದ್ದ ಬಂದ್ ವೇಳೆ ನಡೆದ ಕೋಮುಗಲಭೆಗೆ ಸಂಬಂಧಿಸಿ 1990ರ ಅ. 30ರಂದು ಸುಮಾರು 150 ಜನರನ್ನು ಅಂದಿನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಭಟ್ ಬಂಧಿಸಿದ್ದರು. ಬಂಧಿತರ ಪೈಕಿ ಪ್ರಭುದಾಸ ವೈಷ್ಣಾನಿ ಸಹ ಒಬ್ಬರಾಗಿದ್ದರು. ಬಿಡುಗಡೆಯಾದ ನಂತರ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಜೈಲಿನಲ್ಲಿದ್ದಾಗ ಅವರಿಗೆ ಚಿತ್ರಹಿಂಸೆ ನೀಡಲಾಗಿತ್ತು ಎಂದು ವೈಷ್ಣಾನಿ ಅವರ ಸಹೋದರ ಆರೋಪಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.