ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಿಂದ ಬಂಧಿತರಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಮಂಗಳವಾರ ವೈದ್ಯಕೀಯ ತಪಾಸಣೆಗಾಗಿ ದಕ್ಷಿಣ ಮುಂಬೈನ ಸರ್ಕಾರಿ ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯ ಪೊಲೀಸ್ ಸಂಸ್ಥೆಯಲ್ಲಿ ನಡೆದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ದೇಶಮುಖ್ ಅವರನ್ನು 12 ಗಂಟೆಗಳ ವಿಚಾರಣೆಗೆ ಒಳಪಡಿಸಲಾಗಿತ್ತು. ನಂತರ ಸೋಮವಾರ ತಡರಾತ್ರಿ ಇ.ಡಿ ಅವರನ್ನು ಬಂಧಿಸಿದೆ.
ಇಡಿ ಕಚೇರಿಯಲ್ಲಿ ರಾತ್ರಿ ಕಳೆದ ನಂತರ ದೇಶಮುಖ್ ಅವರನ್ನು 10.15 ಕ್ಕೆ ಹೊರಗೆ ಕರೆತಂದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಅವರನ್ನು ವಿಚಾರಣೆಗಾಗಿ ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.
ದೇಶ್‌ಮುಖ್ ಅವರು ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಇ.ಡಿ ಕಚೇರಿಗೆ ಬೆಳಿಗ್ಗೆ 11.40ರ ವೇಳೆಗೆ ತಮ್ಮ ವಕೀಲರು, ಅವರ ಸಹಾಯಕರ ಜೊತೆಗೆ ಹಾಜರಾದರು. ಸಮನ್ಸ್ ರದ್ದುಪಡಿಸಲು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಕಳೆದ ವಾರ ತಿರಸ್ಕರಿಸಿತ್ತು.
ಪೊಲೀಸ್ ಇಲಾಖೆಯಲ್ಲಿ ₹100 ಕೋಟಿ ಲಂಚ ವಸೂಲಿ, ಸುಲಿಗೆ ಕುರಿತು ಮುಂಬೈ ಪೊಲೀಸ್ ಕಮಿಷನರ್ ಪರಮ್‌ಬೀರ್ ಸಿಂಗ್ ಅವರು ದೇಶ್‌ಮುಖ್ ಅವರ ಮೇಲೆ ಆರೋಪ ಮಾಡಿದ್ದರು. ಆ ಕುರಿತ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಕ್ರಿಮಿನಲ್ ವಿಚಾರಣೆ ನಡೆಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.