ನವದೆಹಲಿ:ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
ಜಸ್ವಂತ್ ಸಿಂಗ್ ಅವರನ್ನು ಜೂನ್ 25 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತುಮತ್ತು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರಿಗೆ, ತಲೆಯಲ್ಲಿನ ಗಾಯವು ತೀವ್ರ ಸ್ವರೂಪ ಪಡೆದಿತ್ತು. ಈ ಮಧ್ಯೆ ಇಂದು ಬೆಳಿಗ್ಗೆ ಅವರಿಗೆ ಹೃದಯ ಸ್ತಂಭನವಾಗಿ ಕೊನೆಯುಸಿರೆಳೆದರು ಎಂದು ದೆಹಲಿಯ ಸೇನಾ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜಸ್ಥಾನ ಮೂಲದ ಜಸ್ವಂತ್ ಸಿಂಗ್ ಅವರು ಭಾರತದ ವಿದೇಶಾಂಗ ಇಲಾಖೆ, ರಕ್ಷಣಾ ಇಲಾಖೆ ಮತ್ತು ಹಣಕಾಸು ಇಲಾಖೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1950 ಮತ್ತು 60 ರ ದಶಕಗಳಲ್ಲಿ ಭಾರತೀಯ ಸೈನ್ಯದಲ್ಲಿ ಅಧಿಕಾರಿಯಾಗಿದ್ದ ಅವರು ನಂತರ ರಾಜಕೀಯ ಸೇರ್ಪಡೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಪ್ರಧಾನಿ ಮೋದಿ ಸಂತಾಪ
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ರಾಜಕೀಯ ಮತ್ತು ಸಮಾಜದ ಬಗೆಗಿನ ತಮ್ಮ ಅನನ್ಯ ದೃಷ್ಟಿಕೋನದಿಂದಾಗಿ ಜಸ್ವಂತ್ ಸಿಂಗ್ ಜಿ ಅವರು ಸದಾ ನೆನಪಿನಲ್ಲಿ ಉಳಿಯುತ್ತಾರೆ. ಅವರು ಬಿಜೆಪಿಯ ಬಲವರ್ಧನೆಗೆ ಸಹಕರಿಸಿದರು. ಅವರೊಂದಿಗಿನ ಮಾತುಕತೆಗಳನ್ನು ನಾನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ದುಃಖ ಬರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿ, ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಜಿ ಅವರ ನಿಧನ ತೀವ್ರ ನೋವಾಗಿದೆ. ರಕ್ಷಣಾ ಮಂತ್ರಿಯಾಗಿ ಸೇರಿದಂತೆ ಹಲವಾರು ರೀತಿಯಲ್ಲಿ ಅವರು ಈ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದಾರೆ. ಈ ಮೂಲಕ ಅವರು ಸಮರ್ಥ ಸಚಿವರು ಮತ್ತು ಉತ್ತಮ ಸಂಸದೀಯಪಟು ಎನಿಸಿಕೊಂಡಿದ್ದರು' ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.