ADVERTISEMENT

ಪಶ್ಚಿಮ ಬಂಗಾಳದ ರಾಜಕೀಯ ‘ಚಾಣಕ್ಯ’, ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ನಿಧನ

ಪಿಟಿಐ
Published 23 ಫೆಬ್ರುವರಿ 2026, 5:07 IST
Last Updated 23 ಫೆಬ್ರುವರಿ 2026, 5:07 IST
<div class="paragraphs"><p>ಮುಕುಲ್ ರಾಯ್</p></div>

ಮುಕುಲ್ ರಾಯ್

   

ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಮತ್ತು ಬಂಗಾಳದ ರಾಜಕೀಯ ‘ಚಾಣಕ್ಯ’ ಎಂದೇ ಗುರುತಿಸಿಕೊಂಡಿದ್ದ ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮುಕುಲ್ ರಾಯ್ ಅವರಿಗೆ 71 ವರ್ಷ ವಯಸ್ಸಾಗಿತ್ತು. ನಮ್ಮ ತಂದೆ ಅವರು ಸಾಲ್ಟ್ ಲೇಕ್‌ನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗಿನ ಜಾವ 1.30ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ಸುಭ್ರಂಶು ರಾಯ್ ತಿಳಿಸಿದ್ದಾರೆ.

ADVERTISEMENT

ರಾಯ್ ಅವರು ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಕೋಮಾ ಸ್ಥಿತಿಗೆ ತಲುಪಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ರಾಯ್ ಅವರು ಪಶ್ಚಿಮ ಬಂಗಾಳದಿಂದ ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್, ಟಿಎಂಸಿ ಮತ್ತು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಅವರು, ನಾಲ್ಕು ದಶಕಗಳ ರಾಜಕೀಯ ಅನುಭವ ಹೊಂದಿದ್ದರು.

1998ರಲ್ಲಿ ಮಮತಾ ಬ್ಯಾನರ್ಜಿ ಅವರು ಹಳೆಯ ಪಕ್ಷದಿಂದ ಹೊರಬಂದು ತೃಣಮೂಲ ಕಾಂಗ್ರೆಸ್ ಅನ್ನು ಸ್ಥಾಪಿಸಿದಾಗ ಅವರೊಂದಿಗೆ ರಾಯ್ ಕೈಜೋಡಿಸಿದ್ದರು. ಪಕ್ಷದ ಪ್ರಮುಖರಲ್ಲಿ ಒಬ್ಬರಾಗಿದ್ದ ರಾಯ್, ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

2006, 2009ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ರಾಯ್‌, ಯುಪಿಎ ಸರ್ಕಾರದ ಎರಡನೇ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದರು.

ಪಶ್ಚಿಮ ಬಂಗಾಳದಲ್ಲಿ 34 ವರ್ಷಗಳ ಎಡರಂಗ ಆಡಳಿತವನ್ನು ಕೊನೆಗೊಳಿಸಿ 2011ರಲ್ಲಿ ಟಿಎಂಸಿ ಐತಿಹಾಸಿಕ ಗೆಲುವು ಸಾಧಿಸಿದ್ದರಲ್ಲಿ ಮತ್ತು ಹಲವು ಜಿಲ್ಲೆಗಳಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ರಾಯ್‌ ಅವರು ಪ್ರಮುಖ ಪಾತ್ರವಹಿಸಿದ್ದರು. ಆದಾಗ್ಯೂ, ಅವರ ವೃತ್ತಿಜೀವನ ವಿವಾದಗಳಿಂದ ಮುಕ್ತವಾಗಿರಲಿಲ್ಲ. ಶಾರದಾ ಚಿಟ್ ಫಂಡ್ ಸೇರಿದಂತೆ ಹಲವು ಪ್ರಕರಣಗಳಲ್ಲಿ ರಾಯ್‌ ಹೆಸರು ತಳುಕು ಹಾಕಿಕೊಂಡಿತ್ತು.

2017ರ ಹೊತ್ತಿಗೆ ರಾಯ್ ಹಾಗೂ ಟಿಎಂಸಿ ನಾಯಕತ್ವದ ನಡುವಿನ ಸಂಬಂಧ ಹದಗೆಟ್ಟಿತ್ತು. ಆದೇ ವರ್ಷ ನವೆಂಬರ್‌ನಲ್ಲಿ ರಾಯ್‌ ಅವರು ಟಿಎಂಸಿ ತೊರೆದು ಬಿಜೆಪಿಗೆ ಸೇರಿದ್ದರು. ಬಂಗಾಳದಲ್ಲಿ ಬಿಜೆಪಿ ಪಕ್ಷದ ಸಂಘಟನೆ ಬಲಪಡಿಸುವ ಜವಾಬ್ದಾರಿ ವಹಿಸಿಕೊಂಡಿದ್ದ ರಾಯ್, ಹಲವು ಟಿಎಂಸಿ ನಾಯಕರನ್ನು ಸೆಳೆದಿದ್ದರು. ಇದರಿಂದಾಗಿ 2019ರ ಲೋಕಸಭಾ ಚುನಾವಣೆಯಲ್ಲಿ 42 ಸ್ಥಾನಗಳ ಪೈಕಿ 18 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು.

2021ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣನಗರ ಉತ್ತರ ಕ್ಷೇತ್ರದಿಂದ ಸ್ಫರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಆದಾಗ್ಯೂ, ಕೆಲವು ತಿಂಗಳುಗಳಲ್ಲಿ ಅವರು ಟಿಎಂಸಿಗೆ ವಾಪಸ್ ಆಗಿದ್ದರು. ಬಿಜೆಪಿ ಪಕ್ಷದಿಂದ ಆಯ್ಕೆಯಾದ ನಂತರ ಪಕ್ಷ ಬದಲಾಯಿಸಿದ್ದಕ್ಕಾಗಿ ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಬಳಿಕ ಅವರ ಆರೋಗ್ಯ ಕ್ಷೀಣಿಸುತ್ತಿದ್ದಂತೆ, ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು.

ರಾಯ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.