ADVERTISEMENT

ಕಾಶ್ಮೀರದ ಸ್ವಾತಂತ್ರ್ಯವನ್ನು ಅತ್ಯಂತ ತೀವ್ರವಾಗಿ ಹತ್ತಿಕ್ಕಲಾಗುತ್ತಿದೆ: ಚಿದಂಬರಂ

ಪಿಟಿಐ
Published 6 ಆಗಸ್ಟ್ 2023, 12:51 IST
Last Updated 6 ಆಗಸ್ಟ್ 2023, 12:51 IST
ಪಿ. ಚಿದಂಬರಂ
ಪಿ. ಚಿದಂಬರಂ    

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದಗೊಳಿಸಿರುವುದರಿಂದ ಶಾಂತಿ ನೆಲೆಸಿದೆ ಎಂದು ಪ್ರತಿಪಾದಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಹಿರಿಯ ನಾಯಕ ಪಿ.ಚಿದಂಬರಂ ವಾಗ್ದಾಳಿ ನಡೆಸಿದ್ದಾರೆ.

ದೇಶದಾದ್ಯಂತ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗಿದೆ. ಆದರೆ, ಕೇಂದ್ರಾಡಳಿತ ಪ್ರದೇಶದಲ್ಲಿ ಅದನ್ನು ಅತ್ಯಂತ ತೀವ್ರವಾಗಿ ಹತ್ತಿಕ್ಕಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

370ನೇ ವಿಧಿಯನ್ನು ರದ್ದುಪಡಿಸಿದ ನಂತರದ ದೊಡ್ಡ ಬದಲಾವಣೆ ಎಂದರೆ, ಜಮ್ಮು ಮತ್ತು ಕಾಶ್ಮೀರದ ಸಾಮಾನ್ಯ ಜನರು ತಮ್ಮ ಸ್ವಂತ ಇಚ್ಛೆಗೆ ಅನುಗುಣವಾಗಿ ಜೀವನ ನಡೆಸುತ್ತಿದ್ದಾರೆ ಎಂದು ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಶ್ರೀನಗರದಲ್ಲಿ ಹೇಳಿದ್ದರು.

ADVERTISEMENT

ಸರ್ಕಾರ ಹಾಗೂ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ರಾಜ್ಯದಲ್ಲಿ ಶಾಂತಿ ನೆಲೆಸಿದೆ ಎಂದು ಸಂಭ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ‘ಸಮಾಧಿಯ ಶಾಂತಿ ಮತ್ತು ಗುಲಾಮರ ಮೌನ’ದ ವಿರುದ್ಧ ಎಚ್ಚರಿಕೆ ನೀಡಿದ ಅಮೆರಿಕ ಮಾಜಿ ಅಧ್ಯಕ್ಷ (ಜಾನ್‌) ಕೆನಡಿಯನ್ನು ನಾನು ಉಲ್ಲೇಖಿಸಲು ಬಯಸುತ್ತೇನೆ ಎಂದು ಚಿದಂಬರಂ ಟ್ವೀಟ್‌ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಅಷ್ಟೊಂದು ಶಾಂತಿ ನೆಲೆಸಿದ್ದರೆ, ಸರ್ಕಾರ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿ ಇರಿಸಿದ್ದೇಕೆ ಮತ್ತು ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ (ಪಿಡಿಪಿ) ಹಾಗೂ ನ್ಯಾಷನಲ್‌ ಕಾನ್ಫರೆನ್ಸ್ ಕಚೇರಿಗಳಿಗೆ ಮುದ್ರೆ ಏಕೆ ಹಾಕಿದೆ ಎಂದು ಚಿದಂಬರಂ ಪ್ರಶ್ನಿಸಿದ್ದಾರೆ.

‘ದೇಶದಾದ್ಯಂತ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗಿದೆ ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಅದನ್ನು ಅತ್ಯಂತ ತೀವ್ರವಾಗಿ ಹತ್ತಿಕ್ಕಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ನಾಲ್ಕನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು, ‘ಐತಿಹಾಸಿಕ’ ನಿರ್ಧಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಅಭಿವೃದ್ಧಿಗೆ ನಾಂದಿ ಹಾಡಿದೆ ಎಂದು ತಿಳಿಸಿತ್ತು.

ಜಮ್ಮು ಮತ್ತು ಕಾಶ್ಮಿರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರವು 2019 ಆಗಸ್ಟ್‌ 5ರಂದು ಹಿಂತೆಗೆದುಕೊಂಡಿತ್ತು ಹಾಗೂ ಜಮ್ಮು ಮತ್ತು ಕಾಶ್ಮೀರ, ಲಡಾಖ್‌ಗಳನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.