ADVERTISEMENT

ಓಮೈಕ್ರಾನ್ ಭೀತಿ: ಮಹಾರಾಷ್ಟ್ರದಲ್ಲಿ ಮತ್ತಷ್ಟು ನಿರ್ಬಂಧ ಸಾಧ್ಯತೆ

ಪಿಟಿಐ
Published 24 ಡಿಸೆಂಬರ್ 2021, 5:28 IST
Last Updated 24 ಡಿಸೆಂಬರ್ 2021, 5:28 IST
ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ನಡುವೆಯೂ ಮುಂಬೈಯ ಜುಹೂ ಬೀಚ್‌ನಲ್ಲಿ ಜನರು ಗುಂಪುಗೂಡಿರುವುದು – ರಾಯಿಟರ್ಸ್ ಚಿತ್ರ
ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ನಡುವೆಯೂ ಮುಂಬೈಯ ಜುಹೂ ಬೀಚ್‌ನಲ್ಲಿ ಜನರು ಗುಂಪುಗೂಡಿರುವುದು – ರಾಯಿಟರ್ಸ್ ಚಿತ್ರ   

ಮುಂಬೈ: ಕೋವಿಡ್–19 ಪ್ರಕರಣಗಳ ಹೆಚ್ಚಳ ಮತ್ತು ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್ ಭೀತಿ ಹಿನ್ನೆಲೆಯಲ್ಲಿ ಮತ್ತಷ್ಟು ನಿರ್ಬಂಧಗಳನ್ನು ವಿಧಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶುಕ್ರವಾರವೇ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳ ಕಾರ್ಯಾಲಯ ಗುರುವಾರ ರಾತ್ರಿ ತಿಳಿಸಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರಾಜ್ಯ ಕೋವಿಡ್ ಕಾರ್ಯಪಡೆಯೊಂದಿಗೆ ಗುರುವಾರ ಮಾತುಕತೆ ನಡೆಸಿದ್ದರು. ಆ ಬಳಿಕ, ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವ ನಿರ್ಧಾರಕ್ಕೆ ಬರಲಾಗಿತ್ತು.

ADVERTISEMENT

ಕ್ರಿಸ್ಮಸ್, ಹೊಸ ವರ್ಷಾಚರಣೆ, ಮದುವೆ, ಹೋಟೆಲ್‌ಗಳಲ್ಲಿ ಪಾರ್ಟಿ ಮತ್ತಿತರ ಸಂದರ್ಭದಲ್ಲಿ ಜನ ಗುಂಪುಸೇರುವುದನ್ನು ತಡೆಯುವ ಬಗ್ಗೆ ಸಭೆಯಲ್ಲಿ ಮಾತುಕತೆ ನಡೆದಿತ್ತು. ಇತರ ರಾಜ್ಯಗಳು, ಅಮೆರಿಕ ಹಾಗೂ ಯುರೋಪ್‌ ದೇಶಗಳಲ್ಲಿ ವಿಧಿಸಲಾಗಿರುವ ನಿರ್ಬಂಧಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಗುರುವಾರ 1,179 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.