ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ವಶದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಗದೊಂದು ಸರ್ಕಾರಿ ನಿರ್ದೇಶನವನ್ನು ಹೊರಡಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ದೆಹಲಿಯ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್, 'ಎಲ್ಲ ಸರ್ಕಾರಿ ಆಸ್ಪತ್ರೆಗಳು ಮತ್ತು 'ಮೊಹಲ್ಲಾ' ಕ್ಲಿನಿಕ್‌ಗಳಲ್ಲಿ ಜನರಿಗೆ ಔಷಧಿ ಮತ್ತು ಪರೀಕ್ಷೆಗಳು ಲಭ್ಯವಾಗುವಂತೆ ನೋಡಿಕೊಳ್ಳಲು ಕೇಜ್ರಿವಾಲ್ ನಿರ್ದೇಶನ ನೀಡಿದ್ದಾರೆ' ಎಂದು ತಿಳಿಸಿದ್ದಾರೆ.
'ಕೇಜ್ರಿವಾಲ್ ಅವರು ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಲಭ್ಯವಿರುವ ಲ್ಯಾಬೋರೇಟರಿ ಪರೀಕ್ಷೆಗಳಲ್ಲಿನ ತೊಂದರೆ ಬಗ್ಗೆ ಮಾಹಿತಿ ಪಡೆದು ನಿರ್ದೇಶನ ನೀಡಿದ್ದಾರೆ. ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಉಚಿತ ಔಷಧಿಗಳ ಕೊರತೆ ಇರಬಾರದು. ಈ ಸಂಬಂಧ ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ' ಎಂದು ಅವರು ತಿಳಿಸಿದ್ದಾರೆ.
ಇ.ಡಿ ವಶದಲ್ಲಿರುವ ಕೇಜ್ರಿವಾಲ್, ಕಷ್ಟದ ಸಮಯದಲ್ಲೂ ದೆಹಲಿ ಜನರ ಯೋಗಕ್ಷೇಮದ ಬಗ್ಗೆ ಮಾತ್ರ ಚಿಂತಿಸುತ್ತಾರೆ ಎಂದು ಅವರು ಹೇಳಿದ್ದಾರೆ.
ಈ ಮೊದಲು ಇ.ಡಿ ಕಸ್ಟಡಿಯಿಂದಲೇ ಕೇಜ್ರಿವಾಲ್ ಅವರು ಜಲ ಇಲಾಖೆಗೆ ಸಂಬಂಧಪಟ್ಟಂತೆ ಮೊದಲ ನಿರ್ದೇಶನ ಹೊರಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.