ಪಣಜಿ: ಉತ್ತರ ಗೋವಾದ ಗ್ರಾಮವೊಂದರ ದೇವಾಲಯದಲ್ಲಿ ಇಂದು (ಶನಿವಾರ) ಬೆಳಗಿನ ಜಾವ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 6 ಜನ ಮೃತಪಟ್ಟು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಣಜಿಯಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಶಿರ್ಗಾಂವ್ ಗ್ರಾಮದಲ್ಲಿರುವ ಶ್ರೀ ಲೈರಾಯಿ ದೇವಿ ದೇವಸ್ಥಾನದಲ್ಲಿ ಬೆಳಗಿನ ಜಾವ 3ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಿಟಿಐ ಜೊತೆ ಮಾತನಾಡಿದ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, 'ದೇಗುಲದ ವಾರ್ಷಿಕ ಉತ್ಸವ ಹಿನ್ನೆಲೆ ಕನಿಷ್ಠ 30 ಸಾವಿರರಿಂದ 40 ಸಾವಿರ ಜನ ಸೇರಿದ್ದರು. ಕೆಲವರು ಇಳಿಜಾರಿನಲ್ಲಿ ನಿಂತಿದ್ದರು. ಅವರಲ್ಲಿ 40 ರಿಂದ 50 ಜನ ಪರಸ್ಪರರ ಮೇಲೆ ಬಿದ್ದಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 6 ಮಂದಿ ಸಾವಿಗೀಡಾಗಿದ್ದಾರೆ. ಹಲವರು ಗಾಯಗೊಂಡಿದ್ದು, ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ' ಎಂದು ಹೇಳಿದ್ದಾರೆ.
ದೇವಾಲಯದಲ್ಲಿ ನಡೆಯುವ ವಾರ್ಷಿಕ ಉತ್ಸವಕ್ಕೆ ಗೋವಾ ಅಷ್ಟೇ ಅಲ್ಲದೇ ಮಹಾರಾಷ್ಟ್ರ ಮತ್ತು ಕರ್ನಾಟಕದಿಂದಲೂ ಸಾವಿರಾರು ಭಕ್ತರು ಭಾಗವಹಿಸುತ್ತಾರೆ.
ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಉತ್ತರ ಗೋವಾ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದ್ದಾರೆ.
'ಇಂದು ಬೆಳಿಗ್ಗೆ ಶಿರ್ಗಾಂವ್‌ನ ದೇಗುಲದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಿಂದ ತೀವ್ರ ದುಃಖಿತನಾಗಿದ್ದೇನೆ. ಗಾಯಾಳುಗಳ ಯೋಗಕ್ಷೇಮ ವಿಚಾರಿಸಲು ನಾನು ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಅಗತ್ಯ ನೆರವು ನೀಡಲಾಗುವುದು' ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಪ್ರಧಾನಿ ನರೇಂದ್ರ ಮೋದಿ ಅವರು ನನ್ನೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ವಿವರವಾಗಿ ಮಾಹಿತಿ ಪಡೆದರು. ಈ ಸಂಕಷ್ಟದ ಸಮಯದಲ್ಲಿ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ' ಎಂದೂ ಸಿಎಂ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
'ಘಟನೆಯಲ್ಲಿ ಕನಿಷ್ಠ 30 ಜನ ಗಾಯಗೊಂಡಿದ್ದು, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ' ಎಂದು ರಾಜ್ಯ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.
ಮಾಹಿತಿ ತಿಳಿದ ತಕ್ಷಣ 5 ಆಂಬ್ಯುಲೆನ್ಸ್‌ಗಳನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ. ಮೂರು ಆಂಬ್ಯುಲೆನ್ಸ್‌ಗಳು ಉತ್ತರ ಗೋವಾ ಜಿಲ್ಲಾ ಆಸ್ಪತ್ರೆಯಲ್ಲಿವೆ. ಪರಿಸ್ಥಿತಿಯನ್ನು ನಿರ್ವಹಿಸಲು ಆರೋಗ್ಯ ಇಲಾಖೆ ತಕ್ಷಣದ ಕ್ರಮಗಳನ್ನು ತೆಗೆದುಕೊಂಡಿದ್ದು, ಹೆಚ್ಚುವರಿ ವೈದ್ಯರನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.