ಮಮತಾ ಬ್ಯಾನರ್ಜಿ ಹಾಗೂ ಸಿ.ವಿ. ಆನಂದ ಬೋಸ್
ಪಿಟಿಐ ಚಿತ್ರ
ಕೋಲ್ಕತ್ತ: ಪಶ್ಚಿಮ ಬಂಗಾಳವು ಮಹಿಳೆಯರಿಗೆ ಸುರಕ್ಷಿತ ಸ್ಥಳವಲ್ಲ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಮಹಿಳೆಯರನ್ನು ವಿಫಲಗೊಳಿಸಿದೆ ಎಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮಾಜದಲ್ಲಿ ಮಹಿಳೆಯರಿಗೆ ಗೌರವಾನ್ವಿತ ಸ್ಥಾನಮಾನವನ್ನು ನೀಡಿದ್ದ ಬಂಗಾಳದ ಪ್ರಾಚೀನ ವೈಭವವನ್ನು ಮರಳಿ ತರಬೇಕಾಗಿದೆ. ಆದರೆ, ಈಗ ರಾಜ್ಯದಲ್ಲಿ ಮಹಿಳೆಯರು ಗೂಂಡಾಗಳಿಗೆ ಹೆದರುತ್ತಿದ್ದಾರೆ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಸಂವೇದನಾ ರಹಿತವಾಗಿ ವರ್ತಿಸುತ್ತಿದೆ’ ಎಂದು ಟೀಕಿಸಿದ್ದಾರೆ.
‘ಬಂಗಾಳದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂಬುದನ್ನು ಸರ್ಕಾರವೇ ಖಚಿತಪಡಿಸಿದೆ. ಕೋಲ್ಕತ್ತದ ಸರ್ಕಾರಿ ಆರ್.ಜಿ. ಕರ್ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವೇ ಇದಕ್ಕೆ ನಿದರ್ಶನ. ಆದರೆ, ಇಂತಹ ಕೃತ್ಯಗಳು ಮರುಕಳಿಸಬಾರದು’ ಎಂದು ಅವರು ಹೇಳಿದ್ದಾರೆ.
ಬೋಸ್ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪರಿಸ್ಥಿತಿ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಆ.9ರಂದು ಕೋಲ್ಕತ್ತದ ಸರ್ಕಾರಿ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಇದರ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.