ಪಾಕಿಸ್ತಾನದ ಡ್ರೋನ್‌ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
–ಪಿಟಿಐ ಚಿತ್ರ
ಶ್ರೀನಗರ: ಜಮ್ಮು–ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ಭಾಗಗಳಲ್ಲಿ ಪಾಕಿಸ್ತಾನದ ಸೇನಾ ಪಡೆಯು ಶನಿವಾರ ತೀವ್ರ ಗುಂಡಿನ ದಾಳಿ ನಡೆಸಿದೆ. ಘಟನೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮೃತಪಟ್ಟಿದ್ದು, ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಜೌರಿ ನಗರದಲ್ಲಿರುವ ಜಿಲ್ಲಾಧಿಕಾರಿಗಳ ನಿವಾಸಕ್ಕೆ ಪಾಕ್‌ನ ಶೆಲ್ ಬಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡಿರುವ ಮತ್ತಿಬ್ಬರು ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಾಜ್ ಕುಮಾರ್ ನಿಧನಕ್ಕೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತಾಪ ವ್ಯಕ್ತಪಡಿಸಿದ್ದಾರೆ.
‘ಇಂದು ರಜೌರಿ ಪಟ್ಟಣವನ್ನು ಗುರಿಯಾಗಿಸಿ ಪಾಕ್ ನಡೆಸಿದ ಶೆಲ್ ದಾಳಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಮೃತಪಟ್ಟಿದ್ದಾರೆ. ಈ ಘಟನೆ ಕುರಿತು ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಒಮರ್ ಅಬ್ದುಲ್ಲಾ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ನಾವು ಸರ್ಕಾರದ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯೊಬ್ಬರನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ರಾಜ್ ಕುಮಾರ್ ಅವರು ಉಪ ಮುಖ್ಯಮಂತ್ರಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ಜತೆಗೆ, ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ಲೈನ್ ಸಭೆಯಲ್ಲೂ ಭಾಗವಹಿಸಿದ್ದರು’ ಎಂದು ಒಮರ್ ಸ್ಮರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.