ನವದೆಹಲಿ: ‘ನಮ್ಮ ಸರ್ಕಾರ ಕೃಷಿ ಉತ್ಪನ್ನಗಳಿಗೆ ನೀಡುವ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಿದ್ದು, ರೈತರ ಆದಾಯ ದ್ವಿಗುಣಗೊಳಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ‘ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ.
‘ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿ‘ ಯೋಜನೆ ಜಾರಿಯಾಗಿ ಎರಡು ವರ್ಷಗಳ ಪೂರ್ಣಗೊಂಡ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿಯವರು, ಕಳೆದ ಏಳು ವರ್ಷಗಳಲ್ಲಿ ಕೃಷಿ ಕ್ಷೇತ್ರದ ಸುಧಾರಣೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಂಡಿದೆ ಎಂದು ಉಲ್ಲೇಖಿಸಿದ್ದಾರೆ.
‘ಕೃಷಿ ಕ್ಷೇತ್ರಕ್ಕೆ ಅಗತ್ಯ ನೀರಾವರಿ ಸೌಲಭ್ಯ, ಉತ್ತಮ ತಂತ್ರಜ್ಞಾನ, ಸಾಲಸೌಲಭ್ಯ, ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ, ಬೆಳೆ ವಿಮೆ, ಮಣ್ಣಿನ ಆರೋಗ್ಯ ರಕ್ಷಣೆಗೆ ಆದ್ಯತೆ, ಮಧ್ಯವರ್ತಿ ವ್ಯವಸ್ಥೆ ನಿರ್ಮೂಲನೆಗೆ ಕ್ರಮ ಸೇರಿದಂತೆ ಕೃಷಿ ಅಭಿವೃದ್ಧಿಗೆ ನಮ್ಮ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ‘ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.
‘ದೇಶಕ್ಕೆ ಅನ್ನ ನೀಡುವುದಕ್ಕಾಗಿ ಹಗಲು ರಾತ್ರಿ ಶ್ರಮಿಸುತ್ತಿರುವ ರೈತರ ಕಲ್ಯಾಣಕ್ಕಾಗಿ ಎರಡು ವರ್ಷಗಳ ಹಿಂದೆ ಇದೇ ದಿನ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಜಾರಿಗೆ ತಂದೆವು. ರೈತರಲ್ಲಿರುವ ಉತ್ಸಾಹ ಮತ್ತು ದೃಢತೆ ನಮಗೆ ಸ್ಪೂರ್ತಿಯಾಗಿದೆ‘ ಎಂದು ಮೋದಿಯವರು ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.