ನವದೆಹಲಿ: ದೆಹಲಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರನ್ನು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ರಾಷ್ಟ್ರಪತಿಗಳಿಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸಿರುವುದು ಆಮ್ ಆದ್ಮಿ ಪಕ್ಷವನ್ನು ದುರ್ಬಲಗೊಳಿಸುವ ರಾಜಕೀಯ ಪಿತೂರಿಯಾಗಿದೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಆರೋಪಿಸಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಎಎಪಿಯನ್ನು ಗುರಿಯಾಗಿಸಲು ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸತ್ಯೇಂದರ್ ಜೈನ್ ಅವರ ಬಂಧನವು ಕಾನೂನುಬಾಹಿರ, ದುರುದ್ದೇಶಪೂರಿತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಿಂದ ಆಯೋಜಿಸಲ್ಪಟ್ಟ ಪಿತೂರಿ ಎಂಬುದನ್ನು ಇದು ಸಾಬೀತುಪಡಿಸುತ್ತದೆ’ ಎಂದು ತಿಳಿಸಿದ್ದಾರೆ.
ಜೈನ್ ಅವರ ಮನೆಯಲ್ಲಿ ಇ.ಡಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ. ಆದರೂ ಅವರು ಸುಮಾರು ಎರಡು ವರ್ಷಗಳ ಕಾಲ ಜೈಲಿನಲ್ಲಿದ್ದರು. ಅರವಿಂದ ಕೇಜ್ರಿವಾಲ್ ಅವರ ವಿಷಯದಲ್ಲೂ ಕೇಂದ್ರ ಸರ್ಕಾರ ಮಾಡಿದ್ದು ಇದನ್ನೇ. ಈ ಬಂಧನಗಳು ಎಂದಿಗೂ ನ್ಯಾಯಕ್ಕಾಗಿ ಅಲ್ಲ. ಅವು ಕೇವಲ ಎಎಪಿಯನ್ನು ಹತ್ತಿಕ್ಕುವ ಉದ್ದೇಶವನ್ನು ಹೊಂದಿವೆ ಎಂದು ಸಿಂಗ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಜಾರಿ ನಿರ್ದೇಶನಾಲಯ ದೇಶದ ಜನತೆ, ಸತ್ಯೇಂದರ್ ಜೈನ್ ಅವರ ಕುಟುಂಬ ಮತ್ತು ದೆಹಲಿ ಜನರ ಕ್ಷಮೆಯಾಚಿಸಬೇಕು ಎಂದು ಸಿಂಗ್ ಆಗ್ರಹಿಸಿದ್ದಾರೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ, ದೆಹಲಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರ ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಕೋರಿ, ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರಪತಿ ಅವರಿಗೆ ಮನವಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 2022ರಲ್ಲಿ ಇ.ಡಿ ಜೈನ್ ಅವರನ್ನು ಬಂಧಿಸಿತ್ತು. ಸದ್ಯ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಇ.ಡಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.