ನವದೆಹಲಿ: ದಿನನಿತ್ಯ ಬಳಸುವ ವಸ್ತುಗಳ ಮೇಲಿನ ಸರಕು ಮತ್ತು ಸೇವಾ(ಜಿಎಸ್‌ಟಿ) ದರಗಳನ್ನು ಪರಿಷ್ಕರಿಸುವ ಮೂಲಕ ದೇಶದ ಜನರಿಗೆ ಕೇಂದ್ರ ಸರ್ಕಾರ ದಸರಾ ಭರ್ಜರಿ ಉಡುಗೊರೆ ನೀಡಿದೆ.
ಬುಧವಾರ ಸಭೆ ನಡೆಸಿದ ಮಂಡಳಿ, ಜಿಎಸ್‌ಟಿ ವ್ಯವಸ್ಥೆಯ ಅಡಿಯಲ್ಲಿ ಈಗಿರುವ ನಾಲ್ಕು ತೆರಿಗೆ ಹಂತಗಳನ್ನು ಎರಡು ಹಂತಗಳಿಗೆ ತಗ್ಗಿಸಿದೆ.
ಜಿಎಸ್‌ಟಿ ಕಡಿತದ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಕೇಂದ್ರ ಸರ್ಕಾರದ ಈ ನಿರ್ಧಾರವು ಜನ ಸಾಮಾನ್ಯರ ಜೀವನವನ್ನು ಸುಧಾರಿಸುವ ಮೂಲಕ ದೇಶದ ಅರ್ಥ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ’ ಎಂದಿದ್ದಾರೆ.
‘ಸ್ವಾತಂತ್ರ್ಯ ದಿನಾಚರಣೆಯ ನನ್ನ ಭಾಷಣದಲ್ಲಿ ಈ ಬಗ್ಗೆ ನಾನು ಮಾತನಾಡಿದ್ದೆ. ಜಿಎಸ್‌ಟಿ ದರಗಳನ್ನು ಪರಿಷ್ಕರಿಸುವ ಮಹತ್ವದ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಿದೆ’ ಎಂದು ಹೇಳಿದ್ದಾರೆ.
‘ರೈತರು, ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರಿಗೆ ಪ್ರಯೋಜಗವಾಗಲೆಂದು ಜಿಎಸ್‌ಟಿ ದರ ಪರಿಷ್ಕರಿಸಲಾಗಿದೆ. ಕೇಂದ್ರ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳಿಗೆ ಜಿಎಸ್‌ಟಿ ಮಂಡಳಿ ಒಪ್ಪಿಗೆ ನೀಡಿರುವುದು ಸಂತಸ ತಂದಿದೆ’ ಎಂದು ತಿಳಿಸಿದ್ದಾರೆ.
‘ಜಿಎಸ್‌ಟಿ ದರ ಪರಿಷ್ಕರಣೆಯು ಸಾಮಾನ್ಯ ಜನರ ಜೀವನವನ್ನು ಸುಧಾರಿಸುತ್ತದೆ. ವಿಶೇಷವಾಗಿ ಸಣ್ಣ ವ್ಯಾಪಾರಿಗಳಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದೆ’ ಎಂದು ಹೇಳಿದ್ದಾರೆ.
ಹೊಸ ತೆರಿಗೆ ದರಗಳು ಸೆಪ್ಟೆಂಬರ್ 22ರಿಂದ ಜಾರಿಗೆ ಬರಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.