ADVERTISEMENT

ಗೋಧ್ರಾ ಗಲಭೆ: ಮೋದಿಗೆ ಕ್ಲೀನ್ ಚಿಟ್ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಪಿಟಿಐ
Published 24 ಜೂನ್ 2022, 5:54 IST
Last Updated 24 ಜೂನ್ 2022, 5:54 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಗುಜರಾತ್ ಗಲಭೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಒಳಗೊಂಡಂತೆ 64 ಮಂದಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಕ್ಲೀನ್‌ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಗಲಭೆಯಲ್ಲಿ ಹತ್ಯೆಗೀಡಾಗಿದ್ದ ಕಾಂಗ್ರೆಸ್ ಮುಖಂಡ ಎಹಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಪ್ರಕರಣವನ್ನು ಮುಕ್ತಾಯಗೊಳಿಸಿ ಎಸ್‌ಐಟಿ ಸಲ್ಲಿಸಿದ್ದ ವರದಿಯನ್ನು ಪ್ರತಿಭಟಿಸಿ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟರು ತಿರಸ್ಕರಿಸಿದ್ದರು. ಅದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ, ವಿಶೇಷ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟರ ತೀರ್ಪನ್ನು ಎತ್ತಿಹಿಡಿದಿದೆ.

ADVERTISEMENT

ಜಾಫ್ರಿ ಅವರ ಅರ್ಜಿಯು ವಿಚಾರಣೆಗೆ ಅರ್ಹವಾಗಿಲ್ಲ ಎಂಬ ಗುಜರಾತ್ ಹೈಕೋರ್ಟ್ ತೀರ್ಪನ್ನು ಸಹ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

2002ರ ಫೆಬ್ರುವರಿ 27ರಂದು ಗುಜರಾತ್‌ನ ಗೋಧ್ರಾ ರೈಲ್ವೆ ನಿಲ್ದಾಣದ ಬಳಿ ಸಬರಮತಿ ಏಕ್ಸ್‌ಪ್ರೆಸ್‌ ರೈಲಿನ ಎಸ್‌–6 ಕೋಚ್‌ಗೆ ಬೆಂಕಿ ಹಚ್ಚಿದ್ದರಿಂದ 59 ಜನರು ಸಾವಿಗೀಡಾದ್ದರು. ಮರುದಿನ (ಫೆಬ್ರುವರಿ 28) ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಹತ್ಯಾಕಾಂಡದಲ್ಲಿ ಸಾವಿಗೀಡಾದ 68 ಜನರಲ್ಲಿ ಕಾಂಗ್ರೆಸ್‌ ಮಾಜಿ ಸಂಸದ ಎಹಸಾನ್ ಜಾಫ್ರಿ ಕೂಡಾ ಒಬ್ಬರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.