ಜ್ಞಾನೇಶ್ ಕುಮಾರ್ ಹಾಗೂ ಕೆ.ಸಿ. ವೇಣುಗೋಪಾಲ್
ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ (ಸಿಇಸಿ) ನೇಮಕ ಮಾಡಿರುವುದಾಗಿ ಕೇಂದ್ರ ಕಾನೂನು ಸಚಿವಾಲಯ ಸೋಮವಾರ ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಇದು ಆತುರದ ನಿರ್ಧಾರ. ಸುಪ್ರೀಂ ಕೋರ್ಟ್‌ನ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಮತ್ತು ಸ್ಪಷ್ಟ ಆದೇಶ ಬರುವ ಮೊದಲು ನೇಮಕಾತಿಯನ್ನು ಪೂರ್ಣಗೊಳಿಸಲು ಸರ್ಕಾರವು ಉತ್ಸುಕವಾಗಿದೆ ಎಂಬುದನ್ನು ತೋರಿಸುತ್ತದೆ ಎಂದು ಕಿಡಿಕಾರಿದೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, 'ತರಾತುರಿಯಲ್ಲಿ ಸರ್ಕಾರ ಮಧ್ಯರಾತ್ರಿ ಹೊಸ ಸಿಇಸಿ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಇದು ನಮ್ಮ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಚುನಾವಣಾ ಪ್ರಕ್ರಿಯೆ ಪವಿತ್ರವಾಗಿರಲು, ಸಿಇಸಿ ನಿಷ್ಪಕ್ಷಪಾತ ಪಾಲುದಾರರಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಅನೇಕ ಸಂದರ್ಭಗಳಲ್ಲಿ ಪುನರುಚ್ಚರಿಸಿದೆ' ಎಂದಿದ್ದಾರೆ.
'ಆಯ್ಕೆ ಸಮಿತಿಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನು ಹೊರಗಿಡಲಾಗಿದೆ. ಸಿಇಸಿ ಹಾಗೂ ಇತರ ಆಯುಕ್ತರ ನೇಮಕಕ್ಕೆ ರೂಪಿಸಲಾಗಿರುವ ಕಾಯ್ದೆಯನ್ನು ಪ್ರಶ್ನಿಸಿರುವ ಪ್ರಕರಣ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಮುಂದಿನ ವಿಚಾರಣೆಯನ್ನು ಫೆಬ್ರುವರಿ 19ಕ್ಕೆ ನಿಗದಿಪಡಿಸಲಾಗಿತ್ತು. ಅಲ್ಲಿಯವರೆಗೆ ಕಾಯಬೇಕಿತ್ತು' ಎಂದು ಅವರು ಹೇಳಿದ್ದಾರೆ.
ತರಾತುರಿಯಲ್ಲಿ ಸಭೆ ನಡೆಸಿ ನೂತನ ಚುನಾವಣಾ ಆಯುಕ್ತರನ್ನು ನೇಮಿಸುವ ಅವರ ನಿರ್ಧಾರವು, ಸುಪ್ರೀಂ ಕೋರ್ಟ್‌ನ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಮತ್ತು ಸ್ಪಷ್ಟ ಆದೇಶ ಬರುವ ಮೊದಲು ನೇಮಕಾತಿಯನ್ನು ಪೂರ್ಣಗೊಳಿಸಲು ಅವರು ಉತ್ಸುಕರಾಗಿದ್ದಾರೆಂದು ಎಂಬುವುದನ್ನು ತೋರಿಸುತ್ತದೆ.
ಇಂತಹ ಅತಿರೇಕದ ನಡವಳಿಕೆಯು ಆಡಳಿತಾರೂಢ ಸರ್ಕಾರವು ಚುನಾವಣಾ ಪ್ರಕ್ರಿಯೆಯನ್ನು ಹೇಗೆ ನಾಶಪಡಿಸುತ್ತಿದೆ ಮತ್ತು ಅದರ ಲಾಭಕ್ಕಾಗಿ ನಿಯಮಗಳನ್ನು ಹೇಗೆ ಬದಲಿಸುತ್ತದೆ ಎಂಬುದರ ಕುರಿತು ಅನೇಕರು ವ್ಯಕ್ತಪಡಿಸಿರುವ ಅನುಮಾನಗಳನ್ನು ದೃಢಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.
ಸಿ.ಇ.ಸಿ ನೇಮಕಕ್ಕೆ ಸಂಬಂಧಿಸಿದ ಆಯ್ಕೆ ಸಮಿತಿಯ ಸ್ವರೂಪವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಪೂರ್ಣಗೊಳ್ಳುವವರೆಗೆ ಹೊಸ ಸಿಇಸಿ ನೇಮಕವನ್ನು ಮುಂದೂಡಬೇಕು ಎಂದು ಕಾಂಗ್ರೆಸ್ ಮನವಿ ಮಾಡಿದ ಕೆಲವೇ ಗಂಟೆಗಳ ನಂತರ ಈ ನೇಮಕ ಆಗಿದೆ. ಕಾಂಗ್ರೆಸ್ ಪಕ್ಷದ ಈ ಬೇಡಿಕೆಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆಯ್ಕೆ ಸಮಿತಿಯ ಸಭೆಯಲ್ಲಿ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.