ನವದೆಹಲಿ: ಉತ್ತರಾಖಂಡದ ಹರಿದ್ವಾರದ ಮಾನಸ ದೇವಿ ದೇವಸ್ಥಾನದ ಬಳಿ ಉಂಟಾದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಾಂತ್ವನ ವ್ಯಕ್ತಪಡಿಸಿದ್ದಾರೆ.
ಭಾನುವಾರ ಬೆಳಿಗ್ಗೆ 9 ಗಂಟೆಗೆ ಘಟನೆ ಸಂಭವಿಸಿದೆ. ದೇವಾಲಯದ ಮೆಟ್ಟಿಲುಗಳ ಮೇಲೆ ವಿದ್ಯುತ್ ಪ್ರವಹಿಸಿದೆ ಎಂಬ ವದಂತಿಯು ಕಾಲ್ತುಳಿತಕ್ಕೆ ಕಾರಣವಾಗಿದೆ. ಘಟನೆಯಲ್ಲಿ 6 ಜನರು ಮೃತಪಟ್ಟಿದ್ದಾರೆ. 35ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
‘ಮಾನಸ ದೇವಿ ದೇವಸ್ಥಾನದ ಬಳಿ ಜರುಗಿರುವ ಕಾಲ್ತುಳಿತದಲ್ಲಿ ಭಕ್ತರು ಮೃತಪಟ್ಟಿರುವ ಸುದ್ಧಿಯು ತೀವ್ರ ದುಃಖ ಉಂಟುಮಾಡಿದೆ. ಘಟನೆಯಲ್ಲಿ ಗಾಯಗೊಂಡ ಭಕ್ತರು ಬೇಗನೇ ಗುಣಮುಖರಾಗಲಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದು, ‘ಹರಿದ್ವಾರದ ಮಾನಸ ದೇವಿ ದೇವಸ್ಥಾನದ ಬಳಿ ನಡೆದ ದುರಂತದಿಂದ ತೀವ್ರ ದುಃಖ ಉಂಟಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಮಾನಸ ದೇವಿಯ ಬಳಿ ಬೇಡಿಕೊಳ್ಳುತ್ತೇನೆ. ಗಾಯಗೊಂಡವರು ಬೇಗನೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.
ಘಟನೆಯಲ್ಲಿ ಉತ್ತರಪ್ರದೇಶ ಮೂಲದ ನಾಲ್ವರು ಮೃತಪಟ್ಟಿದ್ದಾರೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಘಟನೆಯನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.