ಚಂಡೀಗಢ: ಅಂಗಡಿಯ ಮುಂದೆ ಮೂತ್ರ ವಿಸರ್ಜನೆ ಮಾಡುವುದನ್ನು ತಡೆದ ಕಾರಣಕ್ಕೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸ್ಥಳೀಯ ವ್ಯಕ್ತಿಯೊಬ್ಬ ಹರಿಯಾಣದ ಯುವಕನನ್ನು ಶನಿವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.
ಹರಿಯಾಣದ ಜಿಂದ್ ಜಿಲ್ಲೆಯ ಬಾರಹ್ ಕಲಾಂ ಗ್ರಾಮದ ಕಪಿಲ್ (26) ಹತ್ಯೆಯಾದ ಯುವಕ.
ಮೂರು ವರ್ಷಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದ ಕಪಿಲ್, ಅಂಗಡಿಯ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಜಿಂದ್‌ನ ಬಾರಹ್ ಕಲಾಂ ಗ್ರಾಮದ ಮುಖ್ಯಸ್ಥ ಸುರೇಶ್ ಕುಮಾರ್ ಗೌತಮ್ ಸೋಮವಾರ ಹೇಳಿದ್ದಾರೆ.
‘ಕಪಿಲ್ ಕರ್ತವ್ಯದಲ್ಲಿದ್ದ ವೇಳೆ, ಅಂಗಡಿಯ ಹೊರಗಿನ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುವುದನ್ನು ಕಂಡು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ವಾಗ್ವಾದ ನಡೆದು, ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆ ಬಗ್ಗೆ ಕುಟುಂಬಕ್ಕೆ ಮಾಹಿತಿ ನೀಡಲಾಗಿದ್ದು, ಅವರು ಇನ್ನೂ ಆಘಾತದಿಂದ ಹೊರಬಂದಿಲ್ಲ’ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಯುವಕನ ಮೃತದೇಹವನ್ನು ಭಾರತಕ್ಕೆ ತರಲು ನೆರವಾಗುವಂತೆ ಕೇಂದ್ರ ಮತ್ತು ಹರಿಯಾಣ ಸರ್ಕಾರವನ್ನು ಸುರೇಶ್ ಕುಮಾರ್ ಅವರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.