ನವದೆಹಲಿ: ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹರಿಹಾಯ್ದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, 'ಉತ್ತರ ಪ್ರದೇಶದಲ್ಲಿ ದಲಿತರು, ಅಲ್ಪಸಂಖ್ಯಾತರು ಮತ್ತು ಆದಿವಾಸಿಗಳನ್ನು ಹಿಂಸಿಸಲಾಗುತ್ತಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಯುವತಿಯ ಅಂತ್ಯಕ್ರಿಯೆಯನ್ನು ಸೀತೆಯ ಅಗ್ನಿ ಪರೀಕ್ಷೆಗೆ ಮಮತಾ ಹೋಲಿಸಿದ್ದಾರೆ.
'ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಯುವತಿಯನ್ನು ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಆಕೆಯ ಮೃತದೇಹವನ್ನು ತಡರಾತ್ರಿಯಲ್ಲಿ ಸುಟ್ಟು ಹಾಕಲಾಗಿದೆ. ಇದು ಸೀತಾ ದೇವಿಯ ಅಗ್ನಿ ಪರೀಕ್ಷೆಗೆ ಸಮವಾಗಿದೆ' ಎಂದು ಅವರು ಹೇಳಿದ್ದಾರೆ.
ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹತ್ರಾಸ್‌ನ 19 ವರ್ಷದ ಯುವತಿ ದೆಹಲಿಯಲ್ಲಿ ಮಂಗಳವಾರ ಮೃತಪಟ್ಟಿದ್ದರು. ಮೂಳೆ ಮುರಿತ ಮತ್ತು ನಾಲಿಗೆಯು ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು.
ಘಟನೆ ಕುರಿತಂತೆ ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಹಾಯ ಮಾಡಲಿಲ್ಲ. ಆದರೆ, ಸಾರ್ವಜನಿಕರ ಆಕ್ರೋಶದ ನಂತರ ಪ್ರತಿಕ್ರಿಯಿಸಿದರು ಎಂದು ಮಹಿಳೆಯ ಕುಟುಂಬ ಆರೋಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.