ADVERTISEMENT

ಐ.ಟಿ ಮರುಮೌಲ್ಯಮಾಪನ: ಕಾಂಗ್ರೆಸ್‌ ಅರ್ಜಿ ವಜಾ

ಪಿಟಿಐ
Published 22 ಮಾರ್ಚ್ 2024, 11:37 IST
Last Updated 22 ಮಾರ್ಚ್ 2024, 11:37 IST
   

ನವದೆಹಲಿ: ಆದಾಯ ತೆರಿಗೆ ಇಲಾಖೆಯು ತನ್ನ ವಿರುದ್ಧ ಆರಂಭಿಸಿ ರುವ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಕಾಂಗ್ರೆಸ್‌ ಪಕ್ಷ ಸಲ್ಲಿಸಿದ್ದ ಅರ್ಜಿಗಳನ್ನು ದೆಹಲಿ ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಯಶವಂತ್‌ ವರ್ಮಾ ಮತ್ತು ಪುರುಷೇಂದ್ರ ಕುಮಾರ್‌ ಕೌರವ್‌ ಅವರ ಪೀಠವು, ಈ ಕುರಿತ ರಿಟ್‌ ಅರ್ಜಿಗಳನ್ನು ವಜಾಗೊಳಿಸಿರುವುದಾಗಿ ತಿಳಿಸಿತು.

ಕಾಂಗ್ರೆಸ್‌ ಪಕ್ಷವು 2014–15, 2015–16 ಮತ್ತು 2016–17ರ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿತ್ತು. ಈ ಕುರಿತು ವಿಚಾರಣೆ ನಡೆಸಿದ್ದ ಪೀಠವು ಮಾರ್ಚ್‌ 20ರಂದು ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ADVERTISEMENT

ಕಾಂಗ್ರೆಸ್‌ ಪಕ್ಷದ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್‌ ಸಿಂಘ್ವಿ ಅವರು, ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಮಿತಿಯಿಂದ ನಿರ್ಬಂಧಿಸ ಲಾಗಿದೆ ಎಂದು ಪ್ರತಿಪಾದಿಸಿದ್ದರು.

ತೆರಿಗೆ ಪ್ರಾಧಿಕಾರವು ಯಾವುದೇ ಶಾಸನಬದ್ಧ ನಿಬಂಧನೆಗಳನ್ನು ಉಲ್ಲಂಘಿಸಿಲ್ಲ ಎಂದು ಪ್ರತಿಪಾದಿಸಿದ ಐ.ಟಿ ಇಲಾಖೆಯು, ವಶಪಡಿಸಿಕೊಂಡಿ ರುವ ದಾಖಲೆಗಳ ಪ್ರಕಾರ ಪಕ್ಷವು ಸುಮಾರು ₹520 ಕೋಟಿ ಆದಾಯ ಬಹಿರಂಗಪಡಿಸಿಲ್ಲ ಎಂದು ತಿಳಿಸಿದೆ.

₹ 100 ಕೋಟಿ ಬಾಕಿ ತೆರಿಗೆ ವಸೂಲಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ಗೆ ನೀಡಿದ್ದ ನೋಟಿಸ್‌ಗೆ ತಡೆಯಾಜ್ಞೆ ನೀಡಲು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ಇತ್ತೀಚೆಗೆ ನಿರಾಕರಿಸಿತ್ತು. 2018–19ರ ವರ್ಷದ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಮೌಲ್ಯಮಾಪನ ಅಧಿಕಾರಿಯು ₹100 ಕೋಟಿಗಿಂತ ಹೆಚ್ಚಿನ ತೆರಿಗೆ ಪಾವತಿಸುವಂತೆ ಸೂಚಿಸಿದ್ದರು.

ರಾಹುಲ್ ವಿರುದ್ಧ ಮಾನಹಾನಿ ಪ್ರಕರಣ ಏ.2ಕ್ಕೆ ವಿಚಾರಣೆ ಮುಂದೂಡಿಕೆ

ಸುಲ್ತಾನ್‌ಪುರ (ಉತ್ತರ ಪ್ರದೇಶ) (ಪಿಟಿಐ): ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಉತ್ತರ ಪ್ರದೇಶದ ಸುಲ್ತಾನ್‌ಪುರದ ವಿಶೇಷ ನ್ಯಾಯಾಲಯವು ಶುಕ್ರವಾರ ಏಪ್ರಿಲ್ 2ಕ್ಕೆ ಮುಂದೂಡಿತು. 

ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ವಿಜಯ್‌ ಮಿಶ್ರಾ ಅವರು ರಾಹುಲ್‌ ವಿರುದ್ಧ ದೂರು ದಾಖಲಿಸಿದ್ದರು. ವಿಚಾರಣೆಯು ಶುಕ್ರವಾರದಂದೇ ನಡೆಯಬೇಕಿತ್ತು. ಆದರೆ, ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ವಕೀಲರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ವಿಚಾರಣೆಯನ್ನು ಮುಂದೂಡಬೇಕಾಯಿತು ಎಂದು ಮಿಶ್ರಾ ಪರ ವಕೀಲರಾದ ಸಂತೋಷ್‌ ಪಾಂಡೆ ತಿಳಿಸಿದರು. 2018ರ ಆಗಸ್ಟ್‌ನಲ್ಲಿ ಈ ಪ್ರಕರಣ ದಾಖಲಿಸಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್‌ ವಿರುದ್ಧ ನ್ಯಾಯಾಲಯ ವಾರಂಟ್‌ ಹೊರಡಿಸಿತ್ತು. ಫೆ.20ರಂದು ನ್ಯಾಯಾಲಯಕ್ಕೆ ಹಾಜರಾಗಿದ್ದ ರಾಹುಲ್‌ ಅವರಿಗೆ ಜಾಮೀನು ಮಂಜೂರಾಗಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.