ADVERTISEMENT

ರಾಕೇಶ್ ಆಸ್ತಾನ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್‌ ವಜಾ

ಪಿಟಿಐ
Published 12 ಅಕ್ಟೋಬರ್ 2021, 6:16 IST
Last Updated 12 ಅಕ್ಟೋಬರ್ 2021, 6:16 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೆಹಲಿ ನಗರ ಪೊಲೀಸ್ ಆಯುಕ್ತರನ್ನಾಗಿ ಗುಜರಾತ್‌ ಕೇಡರ್‌ನ ಐಪಿಎಸ್ ಅಧಿಕಾರಿ ರಾಕೇಶ್ ಆಸ್ತಾನ ನೇಮಕವನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್‌) ದೆಹಲಿ ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.

ವಕೀಲ ಸಾದ್ರೆ ಆಲಂ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರನ್ನೊಳಗೊಂಡ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಕೇಂದ್ರ ಗೃಹ ಸಚಿವಾಲಯ, ರಾಕೇಶ್ ಆಸ್ತಾನ ಅವರನ್ನು ದೆಹಲಿ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿ ಜುಲೈ 27ರಂದು ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸುವುದು ಹಾಗೂ ಅಂತರ್‌–ಕೇಡರ್‌ ನಿಯೋಜನೆ ಮತ್ತು ಸೇವಾ ಅವಧಿ ವಿಸ್ತರಣೆಯ ಆದೇಶವನ್ನು ರದ್ದುಗೊಳಿಸುವಂತೆ ಕೋರಲಾಗಿತ್ತು.

ADVERTISEMENT

’ಕೇಂದ್ರ ಗೃಹ ಸಚಿವಾಲಯದ ಆದೇಶಗಳು, ಪ್ರಕಾಶ್ ಸಿಂಗ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ನಿರ್ದೇಶನದ ಸ್ಪಷ್ಟ ಉಲ್ಲಂಘನೆಯಾಗಿದೆ. ದೆಹಲಿ ಪೊಲೀಸ್ ಆಯುಕ್ತರ ನೇಮಕಾತಿಗಾಗಿ ಯುಪಿಎಸ್‌ಸಿ ಆಯ್ಕೆ ಸಮಿತಿಯನ್ನು ರಚಿಸಲಿಲ್ಲ ಮತ್ತು ಕನಿಷ್ಠ ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರಬೇಕೆಂಬ ಮಾನದಂಡಗಳನ್ನು ನಿರ್ಲಕ್ಷಿಸಲಾಗಿದೆ’ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.