ಜಬಲ್ಪುರ: ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮಧ್ಯಪ್ರದೇಶದ ಸಚಿವ ವಿಜಯ್ ಶಾ ವಿರುದ್ಧ ಎಫ್‌ಐಆರ್ ದಾಖಲಿಸಲು ಅಲ್ಲಿನ ಹೈಕೋರ್ಟ್ ಆದೇಶಿಸಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಉಗ್ರರ ಸಂಹಾರಕ್ಕಾಗಿ ಭಾರತ ಆರಂಭಿಸಿದ್ದ ಆಪರೇಷನ್ ಸಿಂಧೂರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಾಯುಸೇನೆಯ ಕರ್ನಲ್ ಖುರೇಷಿ ನಿಯಮಿತವಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸಿ, ಕಾರ್ಯಾಚರಣೆಯ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಸಹ ಮಾಹಿತಿ ಹಂಚಿಕೊಳ್ಳುತ್ತಿದ್ದರು.
‘ ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದರೊ ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು’ ಎಂದು ಸೋಫಿಯಾ ಖುರೇಷಿ ಕುರಿತು ಮಧ್ಯಪ್ರದೇಶದ ಸಚಿವ ಬುಡಕಟ್ಟು ವ್ಯವಹಾರಗಳ ಸಚಿವ ಮತ್ತು ಬಿಜೆಪಿ ನಾಯಕ ವಿಜಯ್ ಶಾ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ನೀಡಿರುವ ಹೇಳಿಕೆ ವಿವಾದಕ್ಕೆ ಎಡೆ ಮಾಡಿತ್ತು.
ವಿವಾದಾತ್ಮಕ ಹೇಳಿಕೆ ಕುರಿತಂತೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ನ್ಯಾಯಮೂರ್ತಿಗಳಾದ ಅತುಲ್ ಶ್ರೀಧರನ್ ಮತ್ತು ಅನುರಾಧಾ ಶುಕ್ಲಾ ಅವರನ್ನು ಒಳಗೊಂಡ ಮಧ್ಯಪ್ರದೇಶದ ಹೈಕೋರ್ಟ್‌ನ ವಿಭಾಗೀಯ ಪೀಠ, ಸಚಿವರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ.
ಎಫ್‌ಐಆರ್ ನೋಂದಣಿ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕೆಂದು ವಿಭಾಗೀಯ ಪೀಠ ಹೇಳಿದೆ. ಅರ್ಜಿಯ ಮುಂದಿನ ವಿಚಾರಣೆಯನ್ನು ಗುರುವಾರ ಬೆಳಿಗ್ಗೆ 10.30ಕ್ಕೆ ನಿಗದಿಪಡಿಸಲಾಗಿದೆ. ವಿವರವಾದ ಆದೇಶಕ್ಕಾಗಿ ಕಾಯಲಾಗುತ್ತಿದೆ.
ಶಾ ಅವರ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಅವರನ್ನು ಸಂಪುಟದಿಂದ ತಕ್ಷಣ ವಜಾಗೊಳಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ತೀವ್ರ ಟೀಕೆಗೆ ಗುರಿಯಾದ ಶಾ, ತಮ್ಮ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ, ಹತ್ತು ಬಾರಿ ಕ್ಷಮೆಯಾಚಿಸಲು ಸಿದ್ಧರಿರುವುದಾಗಿ ಹೇಳಿದ್ದಾರೆ. ಕರ್ನಲ್ ಖುರೇಷಿ ಅವರನ್ನು ತಮ್ಮ ಸಹೋದರಿಗಿಂತ ಹೆಚ್ಚಾಗಿ ಗೌರವಿಸುವುದಾಗಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.