ADVERTISEMENT

ಹೋರಾಟಗಾರರ ಬಂಧನ ಪ್ರಕರಣ: ಪೊಲೀಸರಿಗೆ ಬಾಂಬೆ ಹೈಕೋರ್ಟ್ ಛೀಮಾರಿ

ಹೋರಾಟಗಾರರಿಗೆ ನಕ್ಸಲರ ನಂಟು: ಮಾಧ್ಯಮಗಳ ಎದುರು ಬಹಿರಂಗ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2018, 12:53 IST
Last Updated 3 ಸೆಪ್ಟೆಂಬರ್ 2018, 12:53 IST
ಬಾಂಬೆ ಹೈಕೋರ್ಟ್ (ಸಂಗ್ರಹ ಚಿತ್ರ: ಕೃಪೆ–ಪಿಟಿಐ)
ಬಾಂಬೆ ಹೈಕೋರ್ಟ್ (ಸಂಗ್ರಹ ಚಿತ್ರ: ಕೃಪೆ–ಪಿಟಿಐ)   

ಮುಂಬೈ: ಭೀಮಾ ಕೋರೆಗಾಂವ್‌ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿಸಲಾದ ಐವರು ಹೋರಾಟಗಾರರು ಮತ್ತು ಸಾಕ್ಷ್ಯಾಧಾರಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಹಾರಾಷ್ಟ್ರ ಪೊಲೀಸರನ್ನು ಬಾಂಬೆ ಹೈಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ.

ಹೋರಾಟಗಾರರ ಬಂಧನ ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿರುವಾಗ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವ ಅಗತ್ಯವೇನಿತ್ತು ಎಂದು ಹೈಕೋರ್ಟ್ ವಿಭಾಗೀಯ ಪೀಠವು ಪೊಲೀಸರಿಗೆ ಛೀಮಾರಿ ಹಾಕಿದೆ.

ಬಂಧಿತ ಹೋರಾಟಗಾರರಿಗೆ ನಕ್ಸಲರ ನಂಟು ಇತ್ತು ಎನ್ನಲು ತಮ್ಮ ಬಳಿ ಬಲವಾದ ಸಾಕ್ಷಾಧಾರಗಳಿವೆ ಎಂದು ಮಹಾರಾಷ್ಟ್ರ ಪೊಲೀಸ್‌ ಅಧಿಕಾರಿಗಳು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

ADVERTISEMENT

ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಂದರ್ಭದಲ್ಲಿ ಪೊಲೀಸರು ಸುದ್ದಿಗೋಷ್ಠಿಯಲ್ಲಿ ರಹಸ್ಯ ಮಾಹಿತಿಗಳನ್ನು ಬಹಿರಂಗಗೊಳಿಸಿದ್ದು ತಪ್ಪಲ್ಲವೇ ಎಂದು ಹೈಕೋರ್ಟ್‌ ಪ್ರಶ್ನಿಸಿದೆ.

ಎಲ್ಗಾರ್‌ ಪರಿಷತ್‌–ಭೀಮಾ ಕೋರೆಗಾಂವ್‌ ಹಿಂಸಾಚಾರ ಪ್ರಕರಣದ ತನಿಖೆಯನ್ನು ಪುಣೆಯ ಪೊಲೀಸರಿಂದ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸುವಂತೆ ಕೋರಿ ಪುಣೆಯ ಉದ್ಯಮಿ ಸತೀಶ್‌ ಸುರ್ಗಿವ್‌ ಗಾಯಕವಾಡ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಪುನೆಯ ಪೊಲೀಸರು ಪ್ರಕರಣದ ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಪುಣೆ ಪೊಲೀಸರ ತನಿಖೆಗೆ ತಡೆ ನೀಡುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್‌ ವಿಭಾಗೀಯ ಪೀಠವು ವಿಚಾರಣೆಯನ್ನು ಸೆ.7ಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.