ADVERTISEMENT

‘ನಂದಿನಿ’ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ: ಎಚ್‌.ಡಿ ಕುಮಾರಸ್ವಾಮಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜನವರಿ 2023, 6:40 IST
Last Updated 1 ಜನವರಿ 2023, 6:40 IST
   

ಬೆಂಗಳೂರು: ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಭಾನುವಾರ ಎಚ್ಚರಿಸಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕು ಗೆಜ್ಜಲಗೆರೆಯಲ್ಲಿರುವ ಜಿಲ್ಲಾ ಹಾಲು ಒಕ್ಕೂಟದ (ಮನ್‌ ಮುಲ್‌) ಆವರಣದಲ್ಲಿ ಮೆಗಾ ಡೇರಿ ಉದ್ಘಾಟಿಸಿ ಶುಕ್ರವಾರ ಮಾತನಾಡಿದ್ದ ಶಾ, ‘1975ರಿಂದಲೂ ಕೆಎಂಎಫ್‌ ಅಭಿವೃದ್ಧಿ ಹೊಂದುತ್ತಿದೆ. ಅಂತೆಯೇ ಗುಜರಾತ್‌ ಸಹಕಾರ ಒಕ್ಕೂಟವೂ ಪ್ರಗತಿಯ ಹಾದಿಯಲ್ಲಿದೆ. ‘ಅಮುಲ್’ ಹಾಗೂ ‘ನಂದಿನಿ’ ಒಂದಾದರೆ ಹಾಲು ಉತ್ಪಾದಕರಿಗೆ ಇನ್ನಷ್ಟು ಅನುಕೂಲವಾಗುತ್ತದೆ’ ಎಂದಿದ್ದರು.

ಅಮಿತ್ ಶಾ ಅವರ ಹೇಳಿಕೆಯನ್ನು ವಿರೋಧಿಸಿ ಜಾಲತಾಣಗಳಲ್ಲಿ ಸಂದೇಶ ಹಾಕಿರುವ ಹಲವರು, ‌‘ಕರ್ನಾಟಕದ ಅಸ್ಮಿತೆಯಾಗಿರುವ ‘ನಂದಿನಿ’ ಬ್ರ್ಯಾಂಡ್‌ ಮೇಲೆ ಅಮಿತ್‌ ಶಾ ಕಣ್ಣು ಬಿದ್ದಿದೆ ಎಂದು ವ್ಯಾಖ್ಯಾನಿಸಿದ್ದಾರೆ. ಇದಕ್ಕೆ ಈಗ ಎಚ್‌.ಡಿ ಕುಮಾರಸ್ವಾಮಿ ಅವರು ಧ್ವನಿಗೂಡಿಸಿದ್ದಾರೆ.

ADVERTISEMENT

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ‘ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ. ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟ ವ್ಯಕ್ತಿ, ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಕಿವಿ ಹಿಂಡದ ವ್ಯಕ್ತಿ ಈಗ ಕನ್ನಡ ನೆಲದ ಮಣ್ಣಿನಮಕ್ಕಳ ಜೀವನಾಡಿ ಕರ್ನಾಟಕ ಹಾಲು ಮಹಾ ಮಂಡಳಿ (ಕೆಎಂಎಫ್‌- ನಂದಿನಿ) ಯನ್ನು ಗುಜರಾತಿನ ಅಮುಲ್ ನಲ್ಲಿ ವಿಲೀನ ಮಾಡುವ ಹೇಳಿಕೆ ನೀಡಿರುವುದು ಕನ್ನಡಿಗರಿಗೆ ಮಾಡಲು ಹೊರಟಿರುವ ಘೋರ ಅನ್ಯಾಯ’ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಕರ್ನಾಟಕವನ್ನು ಗುಜರಾತ್ ಮಾಡುವ ಧೂರ್ತ ಹುನ್ನಾರ ಇದು. ಅಷ್ಟೇ ಅಲ್ಲ, ಗುಜರಾತ್‌ಗೆ ಕರ್ನಾಟಕವೇ ಪ್ರತಿಸ್ಪರ್ಧಿ ಎನ್ನುವ ಕಾರಣಕ್ಕೆ ಅಭಿವೃದ್ಧಿಯಲ್ಲಿ ಕರ್ನಾಟಕವನ್ನು ಮುಗಿಸೇಬೀಡಬೇಕು ಎನ್ನುವ ದುರಾಲೋಚನೆ ಅಮಿತ್ ಶಾ ಅವರಿಗೆ ಸ್ಪಷ್ಟವಾಗಿ ಇದ್ದಂತಿದೆ. ದೇಶದ ಬೇರಾವ ರಾಜ್ಯದ ಮೇಲೆಯೂ ಇಲ್ಲದ ಅಸಹನೆ, ಅಸೂಯೆ, ವೈಷಮ್ಯ ಕರ್ನಾಟಕದ ಮೇಲೇಕೆ ಅಮಿತ್ ಶಾ ಅವರೇ. ಕನ್ನಡಿಗರನ್ನು ಶತ್ರುಗಳಂತೆ ನೋಡುತ್ತಿದ್ದಾರೆ. ಕನ್ನಡಿಗರನ್ನು ಗುಜರಾತಿನ ಗುಲಾಮರನ್ನಾಗಿ ಮಾಡಲು ಶಾ ಅವರು ಷಡ್ಯಂತ್ರ ರೂಪಿಸಿದ್ದಾರೆ ಎನ್ನುವುದು ನನ್ನ ಅನುಮಾನ‘ ಎಂದು ಎಚ್‌ಡಿಕೆ ಹೇಳಿದ್ದಾರೆ.

‘ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ. ಇಡೀ ದೇಶವನ್ನೇ ಆಳಿದ ಕನ್ನಡಿಗರು ಯಾರೊಬ್ಬರ ಗುಲಾಮರಲ್ಲ. ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ, ಕೈಗಾರಿಕೆ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು. ಬಿಜೆಪಿಯ ಬ್ರಹ್ಮರಾಕ್ಷಸ ರೂಪ ಕನ್ನಡಿಗರಿಗೆ ಈಗ ಅರಿವಾಗುತ್ತಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ ಬ್ಯಾಂಕ್ ಗಳಿಗೆ ಅಡಿಯಾಳನ್ನಾಗಿಸಿ, ಹಿಂದಿ ಭಾಷಿಕರ ಉದ್ಧಾರಕ್ಕಾಗಿ ಕನ್ನಡಿಗರ ಅನ್ನ ಕಸಿದುಕೊಂಡ ಬಿಜೆಪಿ ಈಗ, ನಂದಿನಿಯನ್ನು ಹೊಡೆದುಕೊಂಡು ಹೋಗಲು ಹಿಡನ್ ಅಜೆಂಡಾ ರೂಪಿಸಿದಂತಿದೆ. ಕರ್ನಾಟಕ ಎಂದಿಗೂ ಗುಜರಾತಿನ ವಸಾಹತು ಆಗುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.

‘ಅಮುಲ್ ಜತೆ ನಂದಿನಿ ವಿಲೀನ ಸಾಧ್ಯವಿಲ್ಲ. ನಮ್ಮ ರೈತರ ಅನ್ನ ಕಸಿಯುವ ಕೆಲಸವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೆಎಂಎಫ್ ಕನ್ನಡಿಗರ ಜೀವನಾಡಿ ಮಾತ್ರವಲ್ಲ, ಸಮಸ್ತ ಕನ್ನಡಿಗರ ಆಸ್ತಿ ಮತ್ತು ಅಸ್ಮಿತೆ. ಅಮಿತ್ ಶಾ ಅವರು ಇದೆಲ್ಲವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು’ ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.