ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸರ್ಕಾರಿ ನೌಕರರ ರಜೆಗಳನ್ನು ರದ್ದುಗೊಳಿಸಲಾಗಿದೆ.
ಯಾವುದೇ ತುರ್ತು ಸಂದರ್ಭದಲ್ಲಿ ಆರೋಗ್ಯ ಮತ್ತು ವಿಪತ್ತು ನಿರ್ವಹಣಾ ಸಿದ್ಧತೆಗಳನ್ನು ಪರಿಶೀಲಿಸಲು ಅಧಿಕಾರಿಗಳು ಸಭೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ದೆಹಲಿಯಾದ್ಯಂತ ಭದ್ರತೆ ಕೈಗೊಳ್ಳಲಾಗಿದ್ದು, ರಾತ್ರಿ ವೇಳೆ ಗಸ್ತು ಹೆಚ್ಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರು ಮುಂದಿನ ಆದೇಶದವರೆಗೆ ರಜೆ ತೆಗೆದುಕೊಳ್ಳುವುದನ್ನು ನಿಷೇಧಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.
ಎಲ್ಲಾ ವಲಯಗಳ ವಿಶೇಷ ಆಯುಕ್ತರು 15 ಜಿಲ್ಲೆಗಳ ಉಪ ಆಯುಕ್ತರೊಂದಿಗೆ ಸಭೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಎಲ್ಲಾ ಡಿಸಿಪಿಗಳು ತಮ್ಮ ಪ್ರದೇಶಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಡಿಸಿಪಿಗಳು ಈಗಾಗಲೇ ಎಸಿಪಿಗಳು ಸೇರಿದಂತೆ ಅಧೀನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ದೆಹಲಿ ಪೊಲೀಸರು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯಲ್ಲಿ ಮಾಲ್‌ಗಳು, ಮಾರುಕಟ್ಟೆಗಳು, ಮೆಟ್ರೊ ನಿಲ್ದಾಣಗಳು, ಹೋಟೆಲ್‌ಗಳು, ವಸತಿ ಸಮುಚ್ಚಯ, ವಿಮಾನ ನಿಲ್ದಾಣಗಳು ಸೇರಿದಂತೆ ಜನದಟ್ಟಣೆ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಹಲವಡೆ ತಪಾಸಣೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ದೆಹಲಿ ನಗರ ಸೇರಿದಂತೆ ಗಡಿ ಪ್ರದೇಶಗಳಲ್ಲಿ ಪೊಲೀಸ್ ತಪಾಸಣೆ ಹೆಚ್ಚಿಸಲಾಗಿದ್ದು, ದೆಹಲಿಗೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.