ADVERTISEMENT

ಉತ್ತರ ಕರ್ನಾಟಕಕ್ಕೆ ಕಚೇರಿ ಸ್ಥಳಾಂತರ: 6 ತಿಂಗಳ ಸಮಯ ಕೋರಿದ ರಾಜ್ಯ ಸರ್ಕಾರ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2020, 18:59 IST
Last Updated 3 ಮಾರ್ಚ್ 2020, 18:59 IST
   

ಬೆಂಗಳೂರು: ‘ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ವಿವಿಧ ಇಲಾಖೆಗಳ ಆರು ಕಚೇರಿಗಳನ್ನು ಈಗಾಗಲೇ ಸ್ಥಳಾಂತರಿಸಲಾಗಿದ್ದು, ಬಾಕಿ ಇರುವ ಮೂರು ಕಚೇರಿಗಳನ್ನು ಸ್ಥಳಾಂತರಿಸಲು ಆರು ತಿಂಗಳ ಕಾಲಾವಕಾಶ ಬೇಕು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.

ಈ ಕುರಿತ ಪ್ರಮಾಣ ಪತ್ರವನ್ನು ಸರ್ಕಾರದ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸಲ್ಲಿಸಿದ್ದು, ‘ಈಗಾಗಲೇ ಪುರಾತತ್ವ ಇಲಾಖೆಯ ನಿರ್ದೇಶಕರ ಕಚೇರಿ- ಹಂಪಿ, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮ- ಬೆಳಗಾವಿ, ಸಕ್ಕರೆ ನಿರ್ದೇಶಕರು ಹಾಗೂ ಕಬ್ಬು ಅಭಿವೃದ್ಧಿ ಆಯುಕ್ತರ ಕೇಂದ್ರ ಕಚೇರಿ- ಬೆಳಗಾವಿಗೆ ಪೂರ್ಣ ಪ್ರಮಾಣದಲ್ಲಿ ಸ್ಥಳಾಂತರಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಮಾಣ ಪತ್ರದಲ್ಲೇನಿದೆ?: ‘ಮಾಹಿತಿ ಆಯೋಗದ ಇಬ್ಬರು ಸದಸ್ಯರ ಕಚೇರಿಗಳನ್ನು ಕ್ರಮವಾಗಿ ಬೆಳಗಾವಿ ಮತ್ತು ಕಲಬುರ್ಗಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಒಬ್ಬ ಉಪ ಲೋಕಾಯುಕ್ತರು ಹಾಗೂ ಮಾನವ ಹಕ್ಕುಗಳ ಆಯೋಗದ ಒಬ್ಬ ಸದಸ್ಯರ ಕಚೇರಿಯನ್ನು ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ವಿಚಾರಣಾ ಕಲಾಪ ನಡೆಸುವ ಸಂಬಂಧ ಯೋಜನೆ ರೂಪಿಸಲಾಗಿದೆ’ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

ADVERTISEMENT

‘ಕೃಷ್ಣ ಭಾಗ್ಯ ಜಲ ನಿಗಮ, ಕರ್ನಾಟಕ ನೀರಾವರಿ ನಿಗಮ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಚೇರಿಗಳ ಸ್ಥಳಾಂತರಕ್ಕೆ ಆರು ತಿಂಗಳ ಕಾಲಾವಕಾಶ ಬೇಕು’ ಎಂದು ಕೋರಲಾಗಿದೆ. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಅನುಪಾಲನಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿ ಏಪ್ರಿಲ್ 1ಕ್ಕೆ ವಿಚಾರಣೆ ಮುಂದೂಡಿದೆ.

‘ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಒಂಬತ್ತು ಕಚೇರಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸ್ಥಳಾಂತರಿಸುವ ಕುರಿತು 2019ರ ಜನವರಿ 10ರಂದು ಹೊರಡಿಸಲಾಗಿರುವ ಅಧಿಸೂಚನೆಯನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ವಕೀಲೆ ಸುಧಾ ಕಾಟವ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.