ಹಿಮಾಚಲ ಪ್ರದೇಶದಲ್ಲಿ ಬಸ್ ಅಪಘಾತ
ಮಂಡಿ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಸಾರಿಗೆ ಬಸ್ಸೊಂದು ಕಡಿದಾದ ಕಣಿವೆ ರಸ್ತೆಯಿಂದ ಸುಮಾರು 100 ಅಡಿ ಆಳದ ಕಂದಕಕ್ಕೆ ಉರುಳಿದ್ದು, ಘಟನೆಯಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಅಪಘಾತದಲ್ಲಿ ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರು ಸೇರಿದ್ದಾರೆ. 21 ಮಂದಿ ಗಾಯಗೊಂಡಿದ್ದಾರೆ.
ಹಿಮಾಚಲ ರಸ್ತೆ ಸಾರಿಗೆ ನಿಗಮಕ್ಕೆ (ಎಚ್‌ಆರ್‌ಟಿಸಿ) ಸೇರಿದ ಬಸ್ ಗುರುವಾರ ಸರಕಾಘಾಟ್‌ನಿಂದ ದುರ್ಗಾಪುರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಮಸೆರನ್ ಬಳಿಯ ತರಂಗ್ಲಾದಲ್ಲಿ ಅಪಘಾತಕ್ಕೀಡಾಗಿದೆ. ಬಸ್‌ನಲ್ಲಿ 29 ಮಂದಿ ಸಂಚರಿಸಿದ್ದರು.
ಅವಘಡ ಸಂಬಂಧ ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ದುರ್ಘಟನೆಯ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಒದಗಿಸಲಾಗುತ್ತಿದೆ.
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಸಂತಾಪ ಸೂಚಿಸಿದ್ದಾರೆ. ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ತುರ್ತಾಗಿ ತಲಾ ₹25,000 ಹಾಗೂ ಗಾಯಾಳುಗಳಿಗೆ ತಲಾ ₹5,000 ಪರಿಹಾರವನ್ನು ನೀಡಿದೆ.
ಅವಘಡ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಹ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತಪಟ್ಟವರ ಕುಟುಂಬಗಳಿಗೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50,000 ಪರಿಹಾರ ಘೋಷಿಸಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.