ಮಂಡಿ ಜಿಲ್ಲೆಯಲ್ಲಿ ಭಾರಿ ಮಳೆ ( ಸಂಗ್ರಹ ಚಿತ್ರ)
ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ದಿಢೀರ್ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಮೂವರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಮಂಡಿ ಜಿಲ್ಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ಕೊಚ್ಚಿಹೋಗಿವೆ. ಸಂಚಾರ ಸೇರಿದಂತೆ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಳೆ ಸಂಬಂಧಿತ ಅವಘಡಗಳಲ್ಲಿ ಮೂವರು ಮೃತಪಟ್ಟಿದ್ದು ಒಬ್ಬರು ಗಾಯಗೊಂಡಿದ್ದಾರೆ. ಪ್ರವಾಹ ಪೀಡತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ನಿರಂತರ ಮಳೆಯಿಂದ ಶಿಮ್ಲಾ-ಮತೌರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಹಳೆಯ ಕಾಂಗ್ರಾ ಘಾಟ್‌ನಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಮರಗಳು ಮತ್ತು ವಿದ್ಯುತ್ ತಂತಿಗಳು ಉರುಳಿದ ಬಿದ್ದಿರುವ ವರದಿಗಳು ಬಂದಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜೂನ್ 20ರಂದು ಮನ್ಸೂನ್ ಆರಂಭವಾಗಿದ್ದರಿಂದ ಜುಲೈ 28ರವರೆಗೆ ರಾಜ್ಯದಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 90ಕ್ಕೂ ಜನರು ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ರಾಜ್ಯದ ಸಾವಿರಾರೂ ಮನೆಗಳು ಸಂಪೂರ್ಣವಾಗಿ ಹಾನಿಗೆ ಒಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.