ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ ಅಗರ್ತಲಾದಲ್ಲಿ ಪ್ರತಿಭಟನೆ ನಡೆಸಲಾಯಿತು
–ಪಿಟಿಐ ಚಿತ್ರ
ಅಗರ್ತಲಾ: ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಪ್ರಜೆಗಳಿಗೆ ಸೇವೆ ಒದಗಿಸದಿರಲು ನಿರ್ಧರಿಸಲಾಗಿದೆ ಎಂದು ಆಲ್ ತ್ರಿಪುರಾ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರ ಸಂಘ (ATHROA) ಹೇಳಿದೆ.
ಸೋಮವಾರ ನಡೆದ ತುರ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ATHROA ಪ್ರಧಾನ ಕಾರ್ಯದರ್ಶಿ ಸೈಕತ್ ಬಂಡೋಪಾಧ್ಯಾಯ ತಿಳಿಸಿದ್ದಾರೆ.
‘ನಮ್ಮದು ಜಾತ್ಯತೀತ ದೇಶವಾಗಿದ್ದು, ಎಲ್ಲಾ ಧರ್ಮಗಳನ್ನು ಸಮಾನವಾಗಿ ಗೌರವಿಸುತ್ತೇವೆ. ಆದರೆ, ಬಾಂಗ್ಲಾದೇಶದಲ್ಲಿ ನಮ್ಮ ರಾಷ್ಟ್ರಧ್ವಜವನ್ನು ಅವಮಾನಿಸಲಾಗಿದೆ. ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರು ಮೂಲಭೂತವಾದಿಗಳ ದಬ್ಬಾಳಿಕೆಯನ್ನು ಎದುರಿಸುತ್ತಿದ್ದಾರೆ. ಈ ಹಿಂದೆಯೂ ಇಂತಹ ಘಟನೆಗಳು ನಡೆಯುತ್ತಿದ್ದವು. ಆದರೆ, ಈಗ ಅದು ಮಿತಿ ಮೀರಿದೆ’ ಎಂದು ಬಂಡೋಪಾಧ್ಯಾಯ ಬೇಸರ ಹೊರ ಹಾಕಿದ್ದಾರೆ.
‘ಬಾಂಗ್ಲಾದ ಸದ್ಯದ ಪರಿಸ್ಥಿತಿ ನಿಜವಾಗಿಯೂ ಚಿಂತಾಜನಕವಾಗಿದೆ. ವಿವಿಧ ಉದ್ದೇಶಗಳಿಗಾಗಿ ತ್ರಿಪುರಾಕ್ಕೆ ಬರುವ ಅಲ್ಲಿನ ಪ್ರಜೆಗಳಿಗೆ ನಾವು ಸೇವೆ ಒದಗಿಸುತ್ತೇವೆ. ಆದರೆ, ಬಾಂಗ್ಲಾದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರು ಮೇಲೆ ದೌರ್ಜನ್ಯ ನಡೆಸುತ್ತಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ’ ಎಂದು ಅವರು ಹೇಳಿದ್ದಾರೆ.
ಇತ್ತೀಚೆಗಷ್ಟೇ ಖಾಸಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯೊಂದು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ವಿರೋಧಿಸಿ ಬಾಂಗ್ಲಾದೇಶದ ಯಾವುದೇ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಘೋಷಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.