ADVERTISEMENT

ದಾಖಲೆಗಳ ದೃಢೀಕರಣವಿಲ್ಲದೇ ನೇಮಕಾತಿ ಸರಿಯೇ: ಸುಪ್ರೀಂ ಕೋರ್ಟ್‌ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 16:27 IST
Last Updated 1 ಆಗಸ್ಟ್ 2024, 16:27 IST
ಸುಪ್ರೀಂ ಕೋರ್ಟ್‌ 
ಸುಪ್ರೀಂ ಕೋರ್ಟ್‌    

ನವದೆಹಲಿ: ದಾಖಲೆಗಳನ್ನು ಸರಿಯಾಗಿ ಪರಿಶೀಲನೆ ಮಾಡದೇ ಹಾಗೂ ದೃಢೀಕರಿಸದೇ ಒಬ್ಬ ವ್ಯಕ್ತಿಯನ್ನು ಸರ್ಕಾರಿ ಹುದ್ದೆಗೆ ನೇಮಕ ಮಾಡಲು ಹೇಗೆ ಸಾಧ್ಯ ಎಂದು ಸುಪ್ರೀಂ ಕೋರ್ಟ್‌ ಗುರುವಾರ ಪ್ರಶ್ನಿಸಿದೆ.

ನಕಲಿ ದಾಖಲೆಗಳನ್ನು ಆಧರಿಸಿ ರೈಲ್ವೆ ಇಲಾಖೆಯಲ್ಲಿ ಕೆಲವರನ್ನು ನೇಮಕ ಮಾಡಿಕೊಂಡಿರುವ ಕುರಿತು ಸುಪ್ರೀಂ ಕೋರ್ಟ್‌ ಅಚ್ಚರಿಯನ್ನೂ ವ್ಯಕ್ತಪಡಿಸಿದೆ.

ಪೂರ್ವ ರೈಲ್ವೆಯಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಗೊಂಡಿದ್ದ ಕೆಲ ನೌಕರರನ್ನು ವಜಾಗೊಳಿಸಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಜೆ.ಕೆ.ಮಾಹೇಶ್ವರಿ ಮತ್ತು ಸಂಜಯ್‌ ಕರೋಲ್‌ ಅವರು ಇದ್ದ ಪೀಠ ನಡೆಸಿತು.

ADVERTISEMENT

ರೈಲ್ವೆಯು ದೇಶದ ಅತಿದೊಡ್ಡ ಉದ್ಯೋಗದಾತ ಇಲಾಖೆ. ಇಂತಹ ನೇಮಕಾತಿಗಳ ಸಂದರ್ಭಗಳಲ್ಲಿ ಅಭ್ಯರ್ಥಿಗಳ ದಾಖಲೆಗಳನ್ನು ಸಮರ್ಪಕವಾಗಿ ಪರಿಶೀಲನೆ ನಡೆಸಬೇಕು ಎಂದೂ ನ್ಯಾಯಪೀಠ ಹೇಳಿದೆ.

‘ಅನುಕಂಪದ ಆಧಾರದ ನೌಕರಿ ಹಕ್ಕು ಆಗುವುದಿಲ್ಲ. ಈ ಆಧಾರದಲ್ಲಿ ನೌಕರಿ ಕೇಳುವವರು, ಮೃತ ವ್ಯಕ್ತಿಯೊಂದಿಗಿನ ತಮ್ಮ ಸಂಬಂಧವನ್ನು ದೃಢೀಕರಿಸಬೇಕು ಹಾಗೂ ನೇಮಕಾತಿಗೆ ತಾನು ಯಾಕೆ ಅರ್ಹ ಎಂಬುದನ್ನು ಸಮರ್ಥಿಸಬೇಕು’ ಎಂದು ನ್ಯಾಯಪೀಠ ಹೇಳಿದೆ.

ಈ ಪ್ರಕರಣದಲ್ಲಿ ಕಲ್ಕತ್ತ ಹೈಕೋರ್ಟ್‌ನ ಆದೇಶವನ್ನು ರದ್ದುಪಡಿಸಿದ ನ್ಯಾಯಪೀಠ, ನೌಕರರನ್ನು ಕೆಲಸದಿಂದ ವಜಾಗೊಳಿಸಿ ಸಿಎಟಿ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿಯಿತು.

ತಮ್ಮನ್ನು ನೌಕರಿಯಿಂದ ವಜಾಗೊಳಿಸಿದ್ದನ್ನು ಪ್ರಶ್ನಿಸಿ, ಅನುಕಂಪದ ಆಧಾರದಲ್ಲಿ ನೇಮಕಗೊಂಡಿದ್ದವರು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ (ಸಿಎಟಿ) ಕಲ್ಕತ್ತ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.

ಸಿಎಟಿ ಪೀಠವು ನೌಕರರ ಅರ್ಜಿಯನ್ನು ವಜಾಗೊಳಿಸಿತ್ತು. ನಂತರ ನೌಕರರು ಕಲ್ಕತ್ತ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಕುರಿತು 2012ರಲ್ಲಿ ತೀರ್ಪು ನೀಡಿದ್ದ ಹೈಕೋರ್ಟ್‌, ನ್ಯಾಯಮಂಡಳಿಯ ಆದೇಶವನ್ನು ರದ್ದುಪಡಿಸಿತ್ತು.

ಕಲ್ಕತ್ತ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.