ADVERTISEMENT

ರಾಹುಲ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಅಸ್ಸಾಂ ಸಿ.ಎಂ ವಿರುದ್ಧ ಎಫ್‌ಐಆರ್ ದಾಖಲು

ಪಿಟಿಐ
Published 16 ಫೆಬ್ರುವರಿ 2022, 10:46 IST
Last Updated 16 ಫೆಬ್ರುವರಿ 2022, 10:46 IST
ಹಿಮಂತ್ ಬಿಸ್ವಾ ಶರ್ಮಾ
ಹಿಮಂತ್ ಬಿಸ್ವಾ ಶರ್ಮಾ   

ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ವಿರುದ್ಧ ಹೈದರಾಬಾದ್ ಪೊಲೀಸರು ಬುಧವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

‘ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ ಹಾಗೂ ಪಕ್ಷದ ಸಂಸದ ಎ. ರೇವಂತ್ ರೆಡ್ಡಿ ಅವರು ನೀಡಿದ ದೂರಿನ ಮೇರೆಗೆ ಇಲ್ಲಿನ ಜ್ಯುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಫೆ. 11ರಂದು ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರು ರಾಹುಲ್ ಗಾಂಧಿ ಅವರ ವಿರುದ್ಧ ಉದ್ದೇಶಪೂರ್ವಕಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ’ ಎಂದು ರೇವಂತ್ ರೆಡ್ಡಿ ದೂರಿನಲ್ಲಿ ಆರೋಪಿಸಿದ್ದಾರೆ.

ADVERTISEMENT

‘ಕಾನೂನು ಅಭಿಪ್ರಾಯವನ್ನು ಪಡೆದ ನಂತರ ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಅಸ್ಸಾಂ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

2016ರ ಸೆಪ್ಟೆಂಬರ್‌ನಲ್ಲಿ ನಡೆದ ಸರ್ಜಿಕಲ್ ದಾಳಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರಕ್ಕೆ ಪುರಾವೆ ಕೇಳಿದ್ದರು. ಇದಕ್ಕೆ ಪ್ರತಿಯಾಗಿ ‘ರಾಹುಲ್, ರಾಜೀವ್ ಗಾಂಧಿ ಅವರ ಪುತ್ರ ಎನ್ನುವುದಕ್ಕೆ ಬಿಜೆಪಿ ಎಂದಾದರೂ ಪುರಾವೆ ಕೇಳಿದೆಯೇ?’ ಎಂದು ಹಿಮಂತ ಶರ್ಮಾ ಪ್ರಶ್ನಿಸಿದ್ದರು. ಈ ಹೇಳಿಕೆಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹೇಳಿಕೆಯು ವಿವಾದಕ್ಕೀಡಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.